ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ದೂರು ದಾಖಲಿಸಿ ಕೊಳ್ಳುವಂತೆ ಹೊಳೆನರಸೀಪುರ ಪೊಲೀಸರಿಗೆ ನಿರ್ದೇಶನ ನೀಡಬೇಕು ಹಾಗೂ ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ.
ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಉಪಾಧ್ಯಕ್ಷ ಎಸ್.ಎಚ್. ಲಿಂಗೇಗೌಡ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಆವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್ ಹಾಜರಾಗಿ, ಅರ್ಜಿದಾರರು ನೀಡಿರುವ ದೂರು ದಾಖಲಿಸಿಕೊಳ್ಳುವುದಿಲ್ಲ ಎಂದು ಹೊಳೆನರಸೀಪುರ ಠಾಣೆಯ ಪೊಲೀಸರು ನೀಡಿರುವ ಹಿಂಬರಹವನ್ನು ರದ್ದುಪಡಿಸಿ, ದೂರು ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು. ಆನೇಕ ಮಹಿಳೆಯರು ಈ ಪ್ರಕರಣದಲ್ಲಿ ಸಂತ್ರಸ್ತರಾಗಿದ್ದು, ಅವರೆಲ್ಲರ ಹೇಳಿಕೆ ಪಡೆಯಬೇಕಾಗಿದೆ.
ಇದಲ್ಲದೇ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನೂ ವಿಚಾರಣೆಗೊಳಪಡಿಸಬೇಕಿದೆ. ಆದ್ದರಿಂದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈಗಾ ಗಲೇ ಈ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಅದರ ಪಾಡಿಗೆ ಅದು ತನಿಖೆ ನಡೆಸಲಿ. ಈ ಹಂತದಲ್ಲಿ ಮಧ್ಯಪ್ರವೇಶಿಸು ಅವಶ್ಯಕತೆ ಕಂಡು ಬರುತ್ತಿಲ್ಲ. ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವ ಅಂಶ ಕಂಡು ಬರುತ್ತಿಲ್ಲ ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು.
ಪ್ರಕರಣದ ಬಗ್ಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಉಪಾಧ್ಯಕ್ಷ ಎಸ್.ಎಚ್. ನಿಂಗೇಗೌಡ ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ಈಗಾಗಲೇ ಒಂದು ದೂರು ದಾಖಲಾಗಿದ್ದು, ಅದರ ತನಿಖೆ ನಡೆಯುತ್ತಿದೆ. ಹಾಗಾಗಿ ಮತ್ತೂಂದು ದೂರು ದಾಖಲಿಸಿಕೊಳ್ಳುವುದಿಲ್ಲ ಎಂದು 2024ರ ಏಪ್ರಿಲ್ 27ರಂದು ಪೊಲೀಸರು ಹಿಂಬರಹ ನೀಡಿದ್ದರು. ಆ ಹಿಂಬರಹ ರದ್ದುಪಡಿಸಿ ದೂರು ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು. ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಗೃಹ ಇಲಾಖೆ, ವಕೀಲ ದೇವರಾಜೇಗೌಡ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.