Advertisement

ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ

05:35 PM Jan 05, 2022 | Team Udayavani |

ಯಾದಗಿರಿ: ಜನರು ಮಾಸ್ಕ್ ಧರಿಸದಿದ್ದರೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕಡ್ಡಾಯವಾಗಿ ದಂಡ ವಿಧಿಸಿ, ಗ್ರಾಮೀಣ ಮತ್ತು ನಗರ ಪ್ರದೇಶದಲ್ಲೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್‌-19 ಜಿಲ್ಲಾ ಟಾಸ್ಕ್ ಫೋರ್ಸ್‌ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಎಲ್ಲ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಬಿಲ್‌ ಕಲೆಕ್ಟರ್‌ ಮುಖಾಂತರ ಹಳ್ಳಿಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಕ್ರಮಕೈಗೊಳ್ಳಿ ಎಂದು ಸೂಚಿಸಿದರು.

ಕೋವಿಡ್‌-19 ಪರೀಕ್ಷೆ ತೀವ್ರಗೊಳಿಸಬೇಕು. ಚಿಕಿತ್ಸೆಯು ಅಚ್ಚುಕಟ್ಟಾಗಿ ನಡೆಯಬೇಕು. ಇದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಜಿಲ್ಲೆಯ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್‌ ಪೂರೈಕೆಯಾಗುತ್ತಿರುವ ಪೈಪ್‌ ಲೈನ್‌ಗಳ ಪ್ರಸ್ತುತ ವಸ್ತುಸ್ಥಿತಿ ಹಾಗೂ ಎಲ್ಲ ಆಕ್ಸಿಜನ್‌ ಹಾಸಿಗೆಗಳಿಗೆ ನಿರಂತರ ಆಕ್ಸಿಜನ್‌ ಪೂರೈಕೆಯಾಗುತ್ತಿರುವ ಬಗ್ಗೆ ಒಂದು ದಿನ ಡ್ರೈ ರನ್‌ ಮಾಡಿ ಪೈಪ್‌ಲೈನ್‌ ಸೋರಿಕೆ ಪತ್ತೆಯಾದರೆ ಅದನ್ನು ಸರಿಪಡಿಸಿ ಖಚಿತಪಡಿಸಿಕೊಂಡು ಬಳಕೆಯ ಸಿದ್ಧತೆ ಬಗ್ಗೆ ದೃಢೀಕರಿಸಲು ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

Advertisement

ಜಿಲ್ಲೆಯ ಗಡಿ ಭಾಗದಲ್ಲಿರುವ 10 ಚೆಕ್‌ ಪೋಸ್ಟ್‌ಗಳಿಗೆ ಪೊಲೀಸ್‌ ಸಿಬ್ಬಂದಿಯನ್ನು ನೇಮಕಗೊಳಿಸಲು ಪೊಲೀಸ್‌ ವರಿಷ್ಠಾಕಾರಿಗೆ ಸೂಚಿಸಿದರು. ದಿನದ 24 ಗಂಟೆಯು ಕಾರ್ಯನಿರ್ವಹಿಸಿ ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಬೇಕೆಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸೋಂಕು ದೃಢಪಟ್ಟರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿರುವವರ ಬಗ್ಗೆ ಹೆಚ್ಚಿನ ನಿಗಾ ವಹಿಸುವ ಮೂಲಕ ಸೋಂಕು ಮತ್ತಷ್ಟು ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿಲ್ಲಾಸ್ಪತ್ರೆಯಲ್ಲಿ ಔಷಧಗಳ ಮತ್ತು ಉಪಕರಣಗಳ, ದಾಸ್ತಾನು ಭೌತಿಕವಾಗಿ ಪರಿಶೀಲಿಸಿ ಅವುಗಳ ನಿರ್ವಹಣೆ ಮತ್ತು ಅಸ್ತಿತ್ವದ ಬಗ್ಗೆ ವಿವರದ ವರದಿ ನೀಡಲು ಔಷಧ ನಿಯಂತ್ರಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಈ ವೇಳೆ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿಲ್ಪಾಶರ್ಮಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಶಾ ಆಲಂ ಹುಸೇನ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಇಂದುಮತಿ ಪಾಟೀಲ್‌, ಆರ್‌.ಸಿ.ಎಚ್‌.ಒ ಲಕ್ಷ್ಮೀಕಾಂತ ಒಂಟಿಪೀರ ಇನ್ನಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next