ಉಡುಪಿ: ರಾಜ್ಯ ಕಂಡ ಅಪ್ರತಿಮ ರಾಜಕಾರಣಿ ಹಾಗೂ ಜನಸಾಮಾನ್ಯರ ಮನದಲ್ಲಿ ಚಿರಸ್ಥಾಯಿಯಾಗಿ ಉಳಿದ ಮಹಾನ್ ಮುಖ್ಯಮಂತ್ರಿ ದೇವರಾಜ್ ಅರಸು ಅವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಹೇಳಿದರು.
ಜಿಲ್ಲಾಡಳಿತ, ಜಿ.ಪಂ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆ. 20ರಂದು ನಡೆದ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ|ಡಿ. ದೇವರಾಜ ಅರಸು ಅವರ 102ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುಂದುವರಿದ ಸಮುದಾಯದಲ್ಲಿದ್ದುಕೊಂಡು ಹಿಂದುಳಿದವರ ಬದುಕು ಕಟ್ಟಲು ಶಾಶ್ವತ ಅಡಿಪಾಯ ಹಾಕಿದ ಅರಸು ಅವರು ಉಳುವವನೇ ಹೊಲದೊಡೆಯ ಕಾನೂನನ್ನು ಅನುಷ್ಠಾನಕ್ಕೆ ತಂದು ಜನರ ಮನದಲ್ಲಿ ಅಜರಾಮರರಾದರು.
ಇಂದು ತನ್ನ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರಕಾರ ನೀಡಿದ ಬಜೆಟ್ 2,000 ಕೋ.ರೂ. ಅಂದು ರಾಜ್ಯದ ಬಜೆಟ್ ಇದ್ದುದು 1000 ಕೋ.ರೂ. ಅಂತಹ ಕಷ್ಟದ ಸಮಯದಲ್ಲೂ ಹಿಂದುಳಿದವರ ಬಗ್ಗೆ ಚಿಂತಿಸಿ ಕಾನೂನು ಯಥಾವತ್ತಾಗಿ ಅನುಷ್ಠಾನಕ್ಕೆ ತಂದ ಕೀರ್ತಿ ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದರು.
ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿ.ಪಂ. ಸಿಇಒ ಶಿವಾನಂದ ಕಾಪಶಿ, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾಕರ ಇಲಾಖೆಯ ಅಧಿಕಾರಿ ಹರೀಶ್ ಗಾಂವ್ಕರ್, ಎಚ್‌ಡಿಎಫ್ಸಿ ಬ್ಯಾಂಕಿನ ಮ್ಯಾನೇಜರ್ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು. ಜಿಲ್ಲೆಯ ಹಾಸ್ಟೆಲ್‌ನಲ್ಲಿದ್ದುಕೊಂಡು ಎಸೆಸೆಲ್ಸಿ, ಪಿಯುಸಿ, ಪದವಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ದೇವರಾಜ ಅರಸು ಅವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ಶಿರ್ವದ ಮೂಲ್ಕಿ ಸುಂದರ್‌ರಾಮ್ ಶೆಟ್ಟಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ| ವೈ. ಭಾಸ್ಕರ ಶೆಟ್ಟಿ ಅವರು ಉಪನ್ಯಾಸ ನೀಡಿದರು.