ಚಿಂಚೋಳಿ: ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿನ ಸರ್ಕಾರದ ಆಡಳಿತ ನೋಡಿ ಬೇಸತ್ತಿರುವ ಜನತೆ ಪ್ರಾದೇಶಿಕ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವತ್ತ ಒಲವು ತೋರುತ್ತಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಬಂಡೆಪ್ಪ ಕಾಶೆಂಪೂರ ಹೇಳಿದರು.
ತಾಲೂಕಿನ ನಾಗರಾಳ ಗ್ರಾಮದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಅ ಧಿಕಾರಕ್ಕೆ ಬಂದಾಗಲೆಲ್ಲ ಬಡವರ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ರೈತರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ.
ರೈತರ ಸಾಲ ಮನ್ನಾ ಮಾಡಿದ್ದಾರೆ. ಬೀದರ ಜಿಲ್ಲೆಯಲ್ಲಿ ಕಾರಂಜಾ ಮತ್ತು ಸಣ್ಣ ನೀರಾವರಿ ಕೆರೆಗಳ ನೀರಾವರಿ ಕ್ಷೇತ್ರ ಅಭಿವೃದ್ಧಿಗೋಸ್ಕರ 675 ಕೋಟಿ ರೂ.ನೀಡಲಾಗಿದೆ. ಆದ್ದರಿಂದ ಜೆಡಿಎಸ್‌ನ್ನು ಮತ್ತೂಮ್ಮೆ ಅಧಿಕಾರಕ್ಕೆ ತನ್ನಿ ಎಂದು ಹೇಳಿದರು.
ರಾಜ್ಯದ ಜನತೆ ಜೆಡಿಎಸ್ ಪಕ್ಷಕ್ಕೆ ಐದು ವರ್ಷದ ವರೆಗೆ ಪೂರ್ಣ ಪ್ರಮಾಣದ ಅಧಿಕಾರ ಕೊಟ್ಟು ನೋಡಲಿ. ಇಡೀ ರಾಜ್ಯದ ಚಿತ್ರಣವನ್ನೇ ಬದಲಾವಣೆ ಮಾಡಲಾಗುವುದು. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಹಗರಣಗಳು ಹೆಚ್ಚಾಗಿವೆ. ಅಕ್ರಮ ಚಟುವಟಿಕೆಗಳು, ಭ್ರಷ್ಟಾಚಾರ ಹೆಚ್ಚುತ್ತಿದೆ.
ಚಿಂಚೋಳಿ ತಾಲೂಕಿನ ಐನಾಪುರ ಏತ ನೀರಾವರಿ ಯೋಜನೆಗೆ ಶಾಸಕರ ಬೇಡಿಕೆಯಂತೆ ಯೋಜನೆಗೆ ಅನುದಾನ ಕೊಟ್ಟಿದ್ದರು. ಆದರೆ ಸಮ್ಮಿಶ್ರ ಸರ್ಕಾರ ಪತನವಾದ ನಂತರ ಏತ ನೀರಾವರಿ ಯೋಜನೆ ಬಗ್ಗೆ ಶಾಸಕರು ಚಕಾರ ಎತ್ತುತ್ತಿಲ್ಲ. ಕೆಳದಂಡೆ ಮುಲ್ಲಾಮಾರಿ ಮುಖ್ಯಕಾಲುವೆ ಆಧುನೀಕರಣ ಕಾಮಗಾರಿಗಳಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ.
ಇದರ ತನಿಖೆ ಆಗಬೇಕಾಗಿದೆ. ಕಳೆದ 20 ವರ್ಷಗಳಿಂದ ತಾಲೂಕಿನ ರೈತರು ತಮ್ಮ ಹೊಲಗಳಿಗೆ ನೀರು ಹರಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ ಎಂದರು. ಸಣ್ಣ ನೀರಾವರಿ ಕೆರೆಗಳ ಕಾಲುವೆಗಳಿಗೆ ಕೋಟ್ಯಂತರ ರೂ. ಖರ್ಚು ಮಾಡಿದರೂ ರೈತರಿಗೆ ಯಾವುದೇ ಪ್ರಯೋಜನ ಆಗುತ್ತಿಲ್ಲ. ಜೆಡಿಎಸ್ ಪಕ್ಷ ಅಧಿ ಕಾರಕ್ಕೆ ಬಂದರೆ ಆಯಾ ಭಾಗದ ಕೆರೆಗಳನ್ನು ಅಭಿವೃದ್ಧಿಪಡಿಸಿ ರೈತರಿಗೆ ನೀರಿನ ಅನುಕೂಲ ಮಾಡಿಕೊಡಲಾಗುವುದು ಎಂದು ಹೇಳಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ, ಮುಖಂಡ ಸಂಜೀವನ್ ಯಾಕಾಪುರ, ಜೆಡಿಎಸ್ ತಾಲೂಕು ಅಧ್ಯಕ್ಷ ರವಿಶಂಕರರೆಡ್ಡಿ ಮುತ್ತಂಗಿ, ಹಣಮಂತ ಪೂಜಾರಿ, ನಿಯಾಜ್ ಅಲಿ, ಎಸ್.ಕೆ. ಮುಕ್ತಾರ, ಗೌರಿಶಂಕರ ಕೋಡ್ಲಿ ಇನ್ನಿತರರಿದ್ದರು.