ಬೆಂಗಳೂರು: “ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಬಿಟ್ಟುಹೋದ ಗುರುತಿಗೆ ಜನ ತೀರ್ಪು ನೀಡಿದ್ದಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
“ಈ ಫಲಿತಾಂಶವು ನಿಖಿಲ್ ಕುಮಾರಸ್ವಾಮಿ ಅವರ ಸೋಲು ಎಂದು ನಾನು ಹೇಳುವುದಿಲ್ಲ. ಅವರ ತಂದೆ ಎಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣದಿಂದ ಮುಖ್ಯಮಂತ್ರಿ ಆಗಿದ್ದರು. ಅವರು ಆ ಕ್ಷೇತ್ರದಲ್ಲಿ ಬಿಟ್ಟುಹೋದ ಗುರುತಿಗೆ ಈಗ ಜನ ತೀರ್ಪು ನೀಡಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಟಾಂಗ್ ಕೊಟ್ಟರು.
“ಅದೇ ರೀತಿ, ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಸೋತಿದ್ದಾರೆ ಎಂದು ಹೇಳುವುದಿಲ್ಲ. ಮುಖ್ಯಮಂತ್ರಿಯಾಗಿ ಅವರು ಆ ಕ್ಷೇತ್ರದಲ್ಲಿ ಮಾಡಿದ್ದ ಕೆಲಸದ ಮೇಲೆ ಮತ ನೀಡಿದ್ದಾರೆ. ಸಂಡೂರಿನಲ್ಲಿ ಮೊದಲಿನಿಂದ ಕಾಂಗ್ರೆಸ್ ಗೆಲ್ಲುತ್ತ ಬಂದಿದೆ. ಈ ಮೂರು ಕ್ಷೇತ್ರಗಳಲ್ಲಿ ಗ್ಯಾರಂಟಿ ಹಾಗೂ ಅಭಿವೃದ್ಧಿಗೆ ಜನ ಮತ ನೀಡಿದ್ದಾರೆ. ವಿರೋಧ ಪಕ್ಷಗಳ ನಾಯಕರ ಟೀಕೆ ನೀವು ಗಮನಿಸಿದ್ದೀರಿ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ’ ಎಂದು ತೀಕ್ಷ್ಣವಾಗಿ ಹೇಳಿದರು.
ಕರ್ನಾಟಕ ರಾಜ್ಯದ ಮಹಾಜನತೆ ಇಂದು 2028ರ ವಿಧಾನಸಭೆ ಚುನಾವಣೆಗೆ ರಾಜ್ಯದ ಜನ ದಿಕ್ಸೂಚಿ ಕೊಟ್ಟಿದ್ದಾರೆ. ಪ್ರತಿಪಕ್ಷಗಳ ಸುಳ್ಳು, ಟೀಕೆ, ಅಪಪ್ರಚಾರಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದರು.
ಸಿದ್ದರಾಮಯ್ಯರ ಶುದ್ಧ ಆಡಳಿತಕ್ಕೆ ಬೆಂಬಲ: ಸಿದ್ದರಾಮಯ್ಯ ಅವರ ಸರ್ಕಾರದ ಪರಿಶುದ್ಧ ಆಡಳಿತಕ್ಕೆ ಜನ ಬೆಂಬಲ ನೀಡುತ್ತಿದ್ದಾರೆ. ಈ ಗೆಲುವಿಗೆ ಗ್ಯಾರಂಟಿ ಯೋಜನೆಗಳು, ಸಿದ್ದರಾಮಯ್ಯ ನಾಯಕತ್ವ ಹಾಗೂ ನಮ್ಮ ಕಾರ್ಯಕರ್ತರು, ಶಾಸಕರ ಪರಿಶ್ರಮ ಕಾರಣ. ಇಲ್ಲಿ ನಾನು ಹಾಗೂ ಸಿಎಂ ಅಷ್ಟೇ ಮುಖ್ಯವಲ್ಲ. ಉತ್ತಮ ಆಡಳಿತ ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಹೇಳಿದರು.