Advertisement

ಓವರ್‌ಹೆಡ್‌ ಟ್ಯಾಂಕ್‌ಗಳ ಸಮೀಕ್ಷೆ ನಡೆಸಿ

08:01 AM Jun 25, 2019 | Team Udayavani |

ಬೆಳಗಾವಿ: ಜಿಲ್ಲೆಯಲ್ಲಿ ತೆರವುಗೊಳಿಸ ಬೇಕಾಗಿರುವ ಕುಡಿಯುವ ನೀರಿನ ಓವರ್‌ಹೆಡ್‌ ಟ್ಯಾಂಕ್‌ಗಳ ಸಮೀಕ್ಷೆ ನಡೆಸಿ ಎರಡು ವಾರದಲ್ಲಿ ವರದಿ ನೀಡಬೇಕು ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಂದ್ರ ಕೆ.ವಿ. ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿಲ್ಲಾ ಪಂಚಾಯತ್‌ ಸಭಾಭವನದಲ್ಲಿ ಸೋಮವಾರ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್‌ ಸಭೆಯಲ್ಲಿ ಮಾತನಾಡಿದ ಅವರು, ಶಿಥಿಲಗೊಂಡಿರುವ ಓವರ್‌ಹೆಡ್‌ ಟ್ಯಾಂಕ್‌ಗಳಲ್ಲದೇ ಈಗಾಗಲೇ ನಿರ್ಮಾಣಗೊಂಡು ಬಳಕೆ ಮಾಡದಿರುವ ಟ್ಯಾಂಕ್‌ಗಳ ಸಮಗ್ರ ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು.

ಗ್ರಾಮಗಳಲ್ಲಿರುವ ಒವರ್‌ಹೆಡ್‌ ಟ್ಯಾಂಕ್‌ಗಳನ್ನು ಕೆಡವಲು ಬೇಕಾದ ಸಂಪನ್ಮೂಲ ಗ್ರಾಮ ಪಂಚಾಯತ್‌ ಬಳಿ ಇಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ ವತಿಯಿಂದ ಇದನ್ನು ಕೈಗೊಳ್ಳುವುದು ಸೂಕ್ತ ಎಂದು ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಸಲಹೆ ನೀಡಿದರು.

ಇದಕ್ಕೆ ಪೂರಕವಾಗಿ ಮಾತನಾಡಿದ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಈಗಾಗಲೇ ನಿರ್ಮಾಣಗೊಂಡು ಜನರ ಬಳಕೆಗೆ ಸಾಧ್ಯವಾಗದಿರುವ ಟ್ಯಾಂಕ್‌ಗಳ ಬಗ್ಗೆಯೂ ಸೂಕ್ತ ಕ್ರಮ ವಹಿಸಬೇಕು ಎಂದು ಹೇಳಿದರು.

ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿನ ಅನೆೇಕ ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿವೆ. ಪ್ರತಿ ಬೇಸಿಗೆ ಸಮಯದಲ್ಲಿ ಈ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಆದ್ದರಿಂದ ಇಂತಹ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಬೇಕು ಎಂದು ಸಲಹೆ ನೀಡಿದರು.

Advertisement

ಇದಕ್ಕೆ ಪ್ರತಿಕ್ರಿಯಿಸಿದ ಜಿಪಂ ಸಿಇಒ ರಾಜೇಂದ್ರ ಅವರು ಜಿಲ್ಲೆಯಲ್ಲಿ ಅನೇಕ ಜಲಮೂಲಗಳು ಬತ್ತಿ ಹೋಗಿವೆ. ಅದೇ ರೀತಿ ಕೊಳವೆಬಾವಿಗಳೂ ಕೂಡ ಬತ್ತಿ ಹೋಗಿದ್ದು, ಜಿಲ್ಲೆಯನ್ನು ಬರ ನಿರೋಧಕ ಮಾಡಬೇಕಾದರೆ ಈಗಿರುವ ಜಲಮೂಲಗಳನ್ನು ಬಳಸಿಕೊಂಡು ಶಾಶ್ವತ ಪರಿಹಾರ ಕಂಡುಹಿಡಿಯಲು ಆದ್ಯತೆ ನೀಡುವ ಅಗತ್ಯವಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಪ್ರತಿವರ್ಷ ಎದುರಾಗುವ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾದರೆ ಶಾಶ್ವತ ಯೋಜನೆಯನ್ನು ರೂಪಿಸಿ ಕೊಳವೆಬಾವಿ ಮತ್ತು ಪೈಪ್‌ಲೈನ್‌ಗಳಿಗೆ ಕೊನೆಯ ಆದ್ಯತೆ ನೀಡಬೇಕಿದೆ ಎಂದರು.

ಕುಡಿಯುವ ನೀರಿನ ಯೋಜನೆಗಳಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ಜುಲೈ ಅಂತ್ಯದವರೆಗೆ ಪೂರ್ಣಗೊಳಿಸಲು ಸರ್ಕಾರ ನಿರ್ದೇಶನ ನೀಡಿದೆ. ಆದ್ದರಿಂದ ಹಳೆ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಡಾ.ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅನುದಾನ ಹಂಚಿಕೆ: ಬೈಲಹೊಂಗಲ ತಾಲೂಕಿಗೆ ನಿಗದಿಪಡಿಸುವ ಅನುದಾನವನ್ನು ಕಿತ್ತೂರು ಹಾಗೂ ಬೈಲಹೊಂಗಲ ವಿಧಾನಸಭಾ ಕ್ಷೇತ್ರಗಳ

ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಸಮಾನವಾಗಿ ಹಂಚಿಕೆಯಾಗುವ ರೀತಿಯಲ್ಲಿ ಅಧಿಕಾರಿಗಳು ಕ್ರಿಯಾಯೋಜನೆ ರೂಪಿಸಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಸಲಹೆ ನೀಡಿದರು.

ಇದಕ್ಕೆ ಪೂರಕವಾಗಿ ಮಾತನಾಡಿದ ಕಿತ್ತೂರ ಶಾಸಕ ಮಹಾಂತೇಶ ದೊಡ್ಡಗೌಡರ ತಮ್ಮ ಕ್ಷೇತ್ರದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಮೂಲಕ ಸಮಸ್ಯೆ ಪರಿಹರಿಸಬೇಕು ಎಂದು ಹೇಳಿದರು.

ಜಿಲ್ಲೆಗೆ 98.25 ಕೋಟಿ: ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳಿಗೆ 2019-20 ನೇ ಸಾಲಿಗೆ ಜಿಲ್ಲೆಯ ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗಗಳಿಗೆ ಒಟ್ಟಾರೆ 98.25 ಕೋಟಿ ರೂಪಾಯಿ ಅನುದಾನ ನಿಗದಿಪಡಿಸಲಾಗಿದೆ. ಇದರಲ್ಲಿ ಬೆಳಗಾವಿ ವಿಭಾಗಕ್ಕೆ 47.03 ಹಾಗೂ ಚಿಕ್ಕೋಡಿ ವಿಭಾಗಕ್ಕೆ 51.02 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಸಿಇಒ ಹೇಳಿದರು.

ಏಕ ಗ್ರಾಮ ಯೋಜನೆ, ಬಹುಗ್ರಾಮ ಯೋಜನೆ ಮತ್ತು ವಿಶೇಷ ಅಭಿವೃದ್ಧಿ ಯೋಜನೆಯಡಿ ಬೆಳಗಾವಿ ವಿಭಾಗದಲ್ಲಿ ಈಗಾಗಲೇ ಪ್ರಗತಿಯಲ್ಲಿರುವ 132 ಹಳೆಯ ಕಾಮಗಾರಿಗಳಿಗೆ 13.75 ಕೋಟಿ ಮತ್ತು ಹೊಸ ಕಾಮಗಾರಿಗಳಿಗೆ 33.75 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಅದೇ ರೀತಿ ಚಿಕ್ಕೋಡಿ ವಿಭಾಗದಲ್ಲಿ 551 ಹಳೆ ಕಾಮಗಾರಿಗಳಿಗೆ 29.55 ಕೋಟಿ ಮತ್ತು ಹೊಸ ಕಾಮಗಾರಿ ಕೈಗೊಳ್ಳಲು 21.47 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಜಿ. ಪಂ ಉಪ ಕಾರ್ಯದರ್ಶಿ ಎಸ್‌.ಬಿ.ಮುಳ್ಳಳ್ಳಿ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಮತ್ತು ಸ್ಥಾಯಿ ಸಮಿತಿಯ ಅಧ್ಯಕ್ಷ ಶಂಕರ ಮಾಡಲಗಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ರಮೇಶ್‌ ಗೋರಲ ಮಾತನಾಡಿ, ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಹಾಗೂ ಹೆಚ್ಚಿನ ಅನುದಾನ ಹಂಚಿಕೆ ಮಾಡುವಂತೆ ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next