ಬೆಂಗಳೂರು: ಪ್ರತ್ಯೇಕ ನಾಡ ಧ್ವಜ ಇರಬೇಕು ಎಂಬ ವಿಚಾರ ನ್ಯಾಯಾಲಯದ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಹೇಳಿರುವ ಹೈಕೋರ್ಟ್ ಈ ಸಂಬಂಧ ಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದುವ ಸಂಬಂಧ ಸರಕಾರ ಹಾಗೂ ಸಂಬಂಧಪಟ್ಟ ಇತರ ಪ್ರಾಧಿಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರತ್ಯೇಕ ನಾಡ ಧ್ವಜ ಹೊಂದುವ ವಿಚಾರವು ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ. ತಪ್ಪಾಗಿ ಅರ್ಥೈಸಿಕೊಂಡು ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಅಲ್ಲದೇ ಈ ವಿಚಾರ ಸಾರ್ವಜನಿಕ ಹಿತಾಸಕ್ತಿಗೆ ವಿಷಯಕ್ಕೆ ಸಂಬಂಧಿಸಿದ್ದಲ್ಲ. ಹಾಗಾಗಿ, ಅರ್ಜಿಯನ್ನು ವಜಾ ಮಾಡಲಾಗುವುದು ಎಂದು ಹೇಳಿತು. ಆದರೆ, ಅರ್ಜಿದಾರರು ಸರಕಾರದ ಮುಂದೆ ಸಲ್ಲಿಸಿರುವ ಮನವಿಯನ್ನು ಮುಂದುವರಿಸಬಹುದು ಎಂದು ನ್ಯಾಯಪೀಠ ಹೇಳಿತು. ಮನವಿ ಪರಿಗಣಿಸಲು ಸರಕಾರಕ್ಕೆ ಕಾಲಮಿತಿ ನಿಗದಿಪಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಅದಕ್ಕೆ ನೀವು ನಿಮ್ಮ ಧ್ವಜ ಹಾರಿಸಿದ್ದೀರಿ ನಾವು ನಮ್ಮ ಆದೇಶ ನೀಡಿದ್ದೇವೆ ಎಂದು ನ್ಯಾಯಪೀಠ ಹಾಸ್ಯದ ದಾಟಿಯಲ್ಲಿ ಹೇಳಿತು.