ಮಂಗಳೂರು: ಕೇಂದ್ರ ಮೃಗಾಲಯ ಪ್ರಾಧಿಕಾರದ ಷರತ್ತುಗಳ ಅನುಗುಣವಾಗಿ ಪಿಲಿಕುಳ ಜೈವಿಕ ಉದ್ಯಾನವನದ ಉತ್ತಮ ನಿರ್ವಹಣೆಗೆ ಅಗತ್ಯವಾಗಿರುವ ತಾಂತ್ರಿಕ ರೂಪುರೇಷೆಗಳನ್ನು ರೂಪಿಸುವ ನಿಟ್ಟಿನಲ್ಲಿ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟವರ ಸಭೆಯನ್ನು ಆಯೋಜಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅವರು ಸೂಚನೆ ನೀಡಿದರು.
ಬೆಂಗಳೂರಿನಲ್ಲಿ ಶುಕ್ರವಾರ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ರಾಜ್ಯ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಿಲಿಕುಳ ಜೈವಿಕ ಉದ್ಯಾನವನದ ಮಾನ್ಯತೆಯನ್ನು ಕೆಲವು ಷರತ್ತುಗಳ ಅನುಸಾರವಾಗಿ ಕೇಂದ್ರ ಮೃಗಾಲಯ ಪ್ರಾಧಿಕಾರವು 2025ರ ಡಿ. 1ರ ವರೆಗೆ ನವೀಕರಿಸಿದೆ. ಜೈವಿಕ ಉದ್ಯಾನವನದ ದಿನನಿತ್ಯದ ನಿರ್ವಹಣೆಗಾಗಿ ಅರಣ್ಯ ಇಲಾಖೆಯ ಸಹಾಯ ಪಡೆಯುವಂತೆಯೂ ಸಲಹೆ ನೀಡಿದೆ. ಈ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಅರಣ್ಯ ಇಲಾಖೆ, ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಪಾಲ್ಗೊಂಡಿದ್ದರು.
ಕೇಂದ್ರ ಮೃಗಾಲಯ ಪ್ರಾಧಿಕಾರವು ಜೈವಿಕ ಉದ್ಯಾನವನದಲ್ಲಿರುವ ಪ್ರಾಣಿಗಳ ಸಮರ್ಥ ನಿರ್ವಹಣೆಗಾಗಿ ತಾಂತ್ರಿಕ ಷರತ್ತುಗಳನ್ನು ಪೂರೈಸುವಂತೆ ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸಭೆ ನಡೆಸುವಂತೆ ಸಚಿವರು ಸೂಚನೆ ನೀಡಿದರು.
ಜೈವಿಕ ಉದ್ಯಾನವನದ ದಿನನಿತ್ಯದ ನಿರ್ವಹಣೆಗಾಗಿ ಅಗತ್ಯವಿರುವ ತಾಂತ್ರಿಕ ಸಹಾಯವನ್ನು ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ಪಡೆದುಕೊಳ್ಳುವ ನಿಟ್ಟಿನಲ್ಲಿ ಚರ್ಚಿಸಿ ರಾಜ್ಯ ಸಲಹಾ ಸಮಿತಿಗೆ ಶೀಘ್ರ ವರದಿ ಸಲ್ಲಿಸುವಂತೆ ಸಚಿವರು ಸೂಚನೆ ನೀಡಿದರು.
ಪಿಲಿಕುಳದಲ್ಲಿ ವಿಶ್ವದ ಏಕೈಕ ಕಾಳಿಂಗ ಸರ್ಪ ಸಂತಾನೋತ್ಪತ್ತಿ ಕೇಂದ್ರವಿದ್ದು, ಸಂಸ್ಕೃತಿಯನ್ನು ಬಿಂಬಿಸುವ ಕೇಂದ್ರಗಳಿವೆ. ಇದನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್‌ರೂಪ್‌ಕೌರ್, ಮಾಜಿ ಶಾಸಕ ಜೆ.ಆರ್. ಲೋಬೋ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥ ಕುಮಾರ್ ಪುಷ್ಕರ್, ಜಿಲ್ಲಾಧಿಕಾರಿಗಳು, ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಆಯುಕ್ತರು ಇದ್ದರು.