Advertisement

ಅಂತರ್ಜಲ ವೃದ್ಧಿಗೆ ಯೋಜನೆ ರೂಪಿಸಿ

10:20 AM Jul 07, 2019 | Suhan S |

ಗದಗ: ಇಲಾಖೆಗಳಿಂದ ಜಾರಿಯಾಗುವ ನೀರು ಬಳಕೆ ಯೋಜನೆಗಳು ರೈತರಿಗೆ, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೂಪಿಸುವುದರ ಜೊತೆಗೆ ಅಂತರ್ಜಲದ ಮಟ್ಟ ವೃದ್ಧಿಯಾಗುವಂತೆ ಯೋಜನೆಗಳನ್ನು ರೂಪಿಸಲು ಕೇಂದ್ರ ವಾಣಿಜ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಸುನೀಲಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲೆಯ ಗದಗ ಮತ್ತು ರೋಣ ತಾಲೂಕುಗಳಲ್ಲಿ ಕೇಂದ್ರ ಸರ್ಕಾರದ ಜಲಶಕ್ತಿ ಅಭಿಯಾನದ ಅನುಷ್ಠಾನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬರಗಾಲದಿಂದ ಸಂಕಷ್ಟ ಎದುರಿಸುತ್ತಿರುವ ಜಿಲ್ಲೆಗಳನ್ನು ಗುರುತಿಸಿ, ಅಂತಹ ಜಿಲ್ಲೆಗಳಲ್ಲಿ ಕೇಂದ್ರ ಸರಕಾರ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಅರಣ್ಯೀಕರಣ, ಅಂತರ್ಜಲ ಪುನಶ್ಚೇತನ, ಮಳೆ ನೀರು ಸಂಗ್ರಹಣೆ ಕುರಿತಾಗಿ ಗ್ರಾಮೀಣ ಪ್ರದೇಶದಲ್ಲಿ ಅರಿವು ಮೂಡಿಸುವ ಜಲ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಜಿಲ್ಲೆಯಲ್ಲಿ ಸರಾಸರಿ ಶೇ.55ರಷ್ಟು ಮಳೆಯಾಗುತ್ತಿದ್ದು, ಅದರಲ್ಲಿ ಅಂದಾಜು ಶೇ.15ರಷ್ಟು ನೀರು ಮಾತ್ರ ಬಳಕೆಯಾಗುತ್ತಿದೆ. ಇನ್ನುಳಿದ ನೀರು ಮರುಬಳಕೆಗೆ ಉಪಯೋಗಿಸಲು ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.

ಜಿಲ್ಲೆಯಲ್ಲಿಯ ಪ್ರಮುಖ ಬೆಳೆಗಳ ಮಾಹಿತಿ ಪಡೆದ ಅವರು, ಬರಗಾಲದಿಂದ ಸಂಕಷ್ಟಕ್ಕೊಳಗಾದ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವುದು ಹಾಗೂ ರೈತರಿಗೆ ಅನುಕೂಲವಾಗುವಂತೆ ಚೆಕ್‌ ಡ್ಯಾಂ, ಕೃಷಿ ಹೊಂಡಗಳನ್ನು ನಿರ್ಮಿಸುವ ಯೋಜನೆಯನ್ನು ರೂಪಿಸಿಲು ಸೂಚಿಸಿದರು. ತೋಟಗಾರಿಕೆ ಬೆಳೆಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಿ, ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಪದ್ಧತಿಗಳನ್ನು ಅನುಸರಿಸುವಂತೆ ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲೆಯಲ್ಲಿ ಹಸರೀಕರಣ ಹೆಚ್ಚಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯಿಂದ ಸಸಿಗಳನ್ನು ನೆಟ್ಟು ಅವುಗಳ ಪಾಲನೆಗೂ ಅಗತ್ಯದ ಕ್ರಮ ವಹಿಸಬೇಕು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಗುರುತಿಸಿ ಅವುಗಳ ಅಂತರ್ಜಲಮಟ್ಟ ವೃದ್ಧಿಸಲು ಕೈಗೊಳ್ಳಬೆಕಾದ ಕ್ರಮಗಳ ಕುರಿತು ಹಾಗೂ ಮಳೆ ನೀರು ಹರಿದು ಪೋಲಾಗದಂತೆ ಕೆರೆ, ಟ್ಯಾಂಕಗಳಲ್ಲಿ ನೀರು ಸಂಗ್ರಹ ಮಾಡುವ ಅಗತ್ಯದ ಯೋಜನೆ ರೂಪಿಸಲು ಸಲಹೆ ನೀಡಿದರು.

Advertisement

ಇಳಿಜಾರು ಪ್ರದೇಶದಲ್ಲಿ ನೀರು ಹರಿದು ಮಣ್ಣಿನ ಫಲವತ್ತತೆಯು ಕಡಿಮೆಯಾಗುತ್ತಿದ್ದು, ಅದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ಹಳ್ಳ, ಕೊಳ್ಳ ನದಿಯಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಚೆಕ್‌ ಡ್ಯಾಂಗಳನ್ನು ನಿರ್ಮಿಸಿ, ನೀರು ಸಂಗ್ರಹಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಕೆಲಸವಾಗಬೇಕು. ಕೇಂದ್ರ ಸರಕಾರದ ಜಲಶಕ್ತಿ ಯೋಜನೆಯನ್ನು ಅಭಿಯಾನದ ಮೂಲಕ ಜಾರಿಗೊಳಿಸಲಾಗುತ್ತಿದೆ. ಈ ಅಭಿಯಾನದಲ್ಲಿ ಜಿಲ್ಲಾಡಳಿತ, ಜಿ.ಪಂ, ಕೃಷಿ ಇಲಾಖೆ ಸೇರಿದಂತೆ ಕೃಷಿ ವಿಜ್ಞಾನ ಕೇಂದ್ರ, ಕೃಷಿ ವಿಶ್ವವಿದ್ಯಾಲಯಗಳ ಸಹಕಾರದಿಂದ ಈ ಅಭಿಯಾನವನ್ನು ಸಾಕಾರಗೊಳಿಸಲು ಸುನೀಲಕುಮಾರ ಸೂಚಿಸಿದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ ಜಿಲ್ಲೆಯಲ್ಲಿಯ ಜಲಸಂರಕ್ಷಣೆ ಕುರಿತು ಕೈಗೊಳ್ಳಲಾದ ಕಾಮಗಾರಿಗಳ ಕುರಿತು ಮಾಹಿತಿ ನೀಡಿದರು.

ಕೇಂದ್ರ ಉಕ್ಕು ಸಚಿವಾಲಯದ ಉಪ ಕಾರ್ಯದರ್ಶಿ ಅನೀಲಕುಮಾರ, ಉಪವಿಭಾಗಾಧಿಕಾರಿ ಪಿ.ಎಸ್‌.ಮಂಜುನಾಥ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ, ಜಿ.ಪಂ. ಯೋಜನಾ ನಿರ್ದೇಶಕ ಟಿ.ದಿನೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next