ಮದ್ದೂರು: ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿ ಬೆಸಗರಹಳ್ಳಿ ಗ್ರಾಮದ ತಮಿಳು ಕಾಲೋನಿ ನಿವಾಸಿಗಳು ರಸ್ತೆಯಲ್ಲಿ ಭತ್ತದ ನಾಟಿ ಮಾಡುವ ಮೂಲಕ ಗುರುವಾರ ವಿನೂತನ ಪ್ರತಿಭಟನೆ ನಡೆಸಿದರು.
ತಾಲೂಕಿನ ಬೆಸಗರಹಳ್ಳಿ ಗ್ರಾಪಂ ವ್ಯಾಪ್ತಿಯ ತಮಿಳು ಕಾಲೋನಿಯಲ್ಲಿ ಜಮಾಯಿಸಿದ ನಿವಾಸಿಗಳು ಜಿಲ್ಲಾ ಹಾಗೂ ತಾಲೂಕು ಆಡಳಿತ ಸೇರಿದಂತೆ ಗ್ರಾಪಂ ಹಾಗೂ ಸ್ಥಳೀಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಹಲವು ತಿಂಗಳ ಹಿಂದೆ ನರೇಗಾ ಯೋಜನೆಯಡಿ ನಿರ್ಮಿಸಿದ್ದ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ಕಳಪೆಯಿಂದ ಕೂಡಿತ್ತು. ಲಕ್ಷಾಂತರ ರೂ. ವೆಚ್ಚ ಮಾಡಿ ಕಾಮಗಾರಿ ಮಾಡಿದ್ದರೂ ರಸ್ತೆ ಕೆಲವೇ ತಿಂಗಳಲ್ಲಿ ಕಿತ್ತುಕೊಂಡು ಗುಂಡಿ ಬಿದ್ದಿದೆ. ಸ್ಥಳೀಯ ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಹಣ ದುರ್ಬಳಕೆ ಮಾಡಿಕೊಂಡು ಕಳಪೆ ಕಾಮಗಾರಿಗೆ ಸಹಕರಿಸಿದ್ದಾರೆಂದು ಪ್ರತಿಭಟನಾನಿರತರು ಆರೋಪಿಸಿದರು.
ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ರಸ್ತೆ ಕೆಸರುಗದ್ದೆಯಾಗಿ ಮಾರ್ಪಟ್ಟಿದೆ. ವಾಹನ ಸವಾರರು ಹಾಗೂ ಸ್ಥಳೀಯರು ಸಂಚರಿಸಲು ಹರಸಾಹಸ ಪಡಬೇಕಾದ ಸ್ಥಿತಿ ಬಂದೊದಗಿದೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ದೂರಿದರು. ಕೇವಲ ಚುನಾವಣೆ ಸಂದರ್ಭಗಳಲ್ಲಷ್ಟೇ ಮನೆ ಬಾಗಿಲಿಗೆ ಬರುವ ಚುನಾಯಿತ ಪ್ರತಿನಿಧಿಗಳು ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಕೇಳುವವರಿಲ್ಲದಂತಾಗಿದೆ. ಅಧಿಕಾರದ ಅವಧಿ ಮುಕ್ತಾಯ ಗೊಳ್ಳುತ್ತಿದ್ದರೂ ಬಡಾವಣೆಗಳಿಗೆ ಭೇಟಿ ನೀಡಿ ಮೂಲ ಸೌಲಭ್ಯ ಕಲ್ಪಿಸದಿರುವುದು ನಾಚಿಕೆಗೇಡಿನ ಸಂಗತಿ ಎಂದರು.
ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಇತ್ತ ಗಮನಹರಿಸಿ ರಸ್ತೆ ಡಾಂಬರೀಕರಣ ಕೈಗೊಳ್ಳುವ ಜತೆಗೆ ಮೂಲ ಸೌಲಭ್ಯ ಕಲ್ಪಿಸಲು ಮುಂದಾಗಬೇಕು. ತಪ್ಪಿದಲ್ಲಿ ಗ್ರಾಪಂ ಕಚೇರಿ ಬಳಿ ನಿರಂತರ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಗ್ರಾಪಂ ಮಾಜಿ ಸದಸ್ಯ ಅರುಣ್ ದಾಸ್, ಮಾರಿಮುತ್ತು, ಸವರಿಮುತ್ತು, ರೋಜಾ, ಅಂಥೋಣಿ, ಮಣಿ ಮತ್ತಿತರರು ಭಾಗವಹಿಸಿದ್ದರು.