Advertisement

1ರಿಂದ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ನಿಷೇಧ: ದೀಪಾ

10:32 AM Sep 13, 2019 | Suhan S |

ಧಾರವಾಡ: ಜಿಲ್ಲೆಯಾದ್ಯಂತ ಅ. 1ರಿಂದ ಪ್ಲಾಸ್ಟಿಕ್‌ ನಿಷೇಧ ಜಾರಿಗೊಳಿಸಲು ಎಲ್ಲ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಪಣ ತೊಡಬೇಕು. ಸಾರ್ವಜನಿಕರು ಪ್ಲಾಸ್ಟಿಕ್‌ ಬಳಕೆ ಕೈಬಿಟ್ಟು ಆಂದೋಲನಕ್ಕೆ ಕೈಜೋಡಿಸಬೇಕು ಎಂದು ಡಿಸಿ ದೀಪಾ ಚೋಳನ್‌ ಹೇಳಿದರು.

Advertisement

ಜಿಪಂ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅ. 1ರಿಂದ ಕಡ್ಡಾಯವಾಗಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಕೈಬಿಡಬೇಕು. ಸ್ಟೀಲ್ ಲೋಟಗಳು ಅಥವಾ ಕಾಗದದ ಲೋಟಗಳನ್ನು ಬಳಸಬೇಕು. ಹೂಗುಚ್ಛಗಳಿಗೆ ಪ್ಲಾಸ್ಟಿಕ್‌ ಹೊದಿಕೆ ಹಾಕಬಾರದು. ಕಚೇರಿ ಆವರಣಗಳನ್ನು ಸ್ವಚ್ಛವಾಗಿಟ್ಟುಕೊಂಡು ಸುಣ್ಣ ಬಣ್ಣ ಬಳಿಸಬೇಕು. ಹು-ಧಾ ಮಹಾನಗರ ಪಾಲಿಕೆ ಅಧಿಕಾರಿಗಳು ಅವಳಿ ನಗರದ ಹೋಟೆಲ್, ಕಲ್ಯಾಣಮಂಟಪಗಳ ಸಮೀಕ್ಷೆ ಮಾಡಿ ಅರಿವು ಮೂಡಿಸಬೇಕು. ಹಸಿ ಕಸ, ಒಣ ಕಸ ವಿಂಗಡಣೆ ಮಾಡಿ ತ್ಯಾಜ್ಯ ಸಂಗ್ರಹಿಸಬೇಕು. ಗ್ರಾಪಂ ಮಟ್ಟದಲ್ಲಿಯೂ ಇದು ಜಾರಿಗೊಳ್ಳಬೇಕು ಎಂದರು.

ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್‌ ನಿಷೇಧ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ, ಪ್ರಬಂಧ, ಚರ್ಚಾ, ಚಿತ್ರಕಲೆ, ನಾಟಕ, ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸಿ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳ ಗುಂಪುಗಳನ್ನು ರಚಿಸಿ, ಸಾರ್ವಜನಿಕರ ಮನೆ ಮನೆಗೆ ತೆರಳಿ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ಸರ್ಕಾರೇತರ ಸಂಘ-ಸಂಸ್ಥೆಗಳು ಹಾಗೂ ಆಶಾ ಕಾರ್ಯಕರ್ತೆಯರ ಸಹಕಾರದೊಂದಿಗೆ ತ್ಯಾಜ್ಯ ಸಂಗ್ರಹಿಸುತ್ತಾ ಜಾಥಾಗಳನ್ನು ಆಯೋಜಿಸಬೇಕು. ಪ್ಲಾಸ್ಟಿಕ್‌ ತ್ಯಾಜ್ಯ ವಿಲೇವಾರಿ ಮಾಡಲು ವಾಹನಗಳ ವ್ಯವಸ್ಥೆ ಮಾಡಬೇಕು. ಪ್ಲಾಸ್ಟಿಕ್‌ ಚೀಲಗಳ ಬದಲಿಗೆ ಬಟ್ಟೆಯ ಹಾಗೂ ನಾರಿನ ಚೀಲಗಳನ್ನು ಬಳಸಲು ಪ್ರೋತ್ಸಾಹಿಸಬೇಕು ಎಂದರು.

ಅಕ್ಟೋಬರ್‌ ತಿಂಗಳಿನಲ್ಲಿ ನಿರಂತರವಾಗಿ ಎಲ್ಲಾ ಗ್ರಾಪಂ, ತಾಪಂ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಜಿಲ್ಲಾಮಟ್ಟದಲ್ಲಿ ವೈವಿಧ್ಯಮಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಜನಸಾಮಾನ್ಯರಲ್ಲಿ ಪ್ಲಾಸ್ಟಿಕ್‌ ಬಳಕೆ ಕೈಬಿಡಲು ಮನವರಿಕೆ ಮಾಡಬೇಕು ಎಂದು ಹೇಳಿದರು.

Advertisement

ಪಾಲಿಕೆ ಆಯುಕ್ತ ಡಾ| ಸುರೇಶ್‌ ಇಟ್ನಾಳ ಮಾತನಾಡಿ, ಅವಳಿ ನಗರದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದರು. ಅಪರ ಡಿಸಿ ಇಬ್ರಾಹಿಂ ಮೈಗೂರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿನಾಯಕ ಪಾಲನಕರ್‌ ಸೇರಿದಂತೆ ಜಿಲ್ಲೆಯ ಎಲ್ಲ ತಹಶೀಲ್ದಾರರು, ವಿವಿಧ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next