ನವದೆಹಲಿ:ಸೆಂಟ್ರಲ್ ವಿಸ್ಟಾ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿ, ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿರುವ ಆದೇಶವನ್ನು ಪ್ರಶ್ನಿಸಿ ಬುಧವಾರ (ಜೂನ್ 02) ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.
ಇದನ್ನೂ ಓದಿ:ಉಡುಪಿ ಜಿಲ್ಲೆಯ 33 ಗ್ರಾಮಗಳು ಸ್ತಬ್ಧ: ಮೊದಲ ದಿನದ ಸಂಪೂರ್ಣ ಲಾಕ್‌ಡೌನ್ ಯಶಸ್ವಿ
ಪ್ರದೀಪ್ ಕುಮಾರ್ ಯಾದವ್ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದು, ಕೋವಿಡ್ 19 ಮಾರಣಾಂತಿಕ ಸೋಂಕು ಕ್ಷಿಪ್ರವಾಗಿ ಹರಡುತ್ತಿದ್ದ ಸಂದರ್ಭದಲ್ಲಿ ನೂರಾರು ಅಮಾಯಕ ಕಾರ್ಮಿಕರನ್ನು ಬೃಹತ್ ಕಟ್ಟಡ ನಿರ್ಮಾಣದ ಕಾಮಗಾರಿಗೆ ಬಳಸಿಕೊಳ್ಳುತ್ತಿರುವುದು ಕಳವಳಕಾರಿ ವಿಚಾರವಾಗಿದೆ ಎಂದು ತಿಳಿಸಿದ್ದಾರೆ.
ಕೋವಿಡ್ 19 ಸಾಂಕ್ರಾಮಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಸೆಂಟ್ರಲ್ ವಿಸ್ಟಾ ಅವಿನ್ಯೂ ಪುನರಾಭಿವೃದ್ಧಿಯ ಯೋಜನೆ ತುರ್ತು ಚಟುವಟಿಕೆ ಎಂಬುದನ್ನು ಹೈಕೋರ್ಟ್ ಸಮರ್ಥಿಸಿಲ್ಲ. ಅಲ್ಲದೇ ಮುಖ್ಯವಾಗಿ ಲಾಕ್ ಡೌನ್ ಸಂದರ್ಭದಲ್ಲಿ ಇಡೀ ದೇಶದಲ್ಲಿಯೇ ತುರ್ತು ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಸೆಂಟ್ರಲ್ ವಿಸ್ಟಾ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ವಿಭಾಗೀಯ ಪೀಠವು, ಇದೊಂದು ಸಾರ್ವಜನಿಕವಾಗಿ ಮಹತ್ವವುಳ್ಳ ನಿರ್ಮಾಣ ಕಾರ್ಯವಾಗಿದೆ. ನಿರ್ಮಾಣ ಕೆಲಸ ಮಾಡುವ ಕಾರ್ಮಿಕರು ಅದೇ ಜಾಗದಲ್ಲಿ ಇರುವುದರಿಂದ ಸೆಂಟ್ರಲ್ ವಿಸ್ಟಾ ಯೋಜನೆಯ ಕೆಲಸ ಸ್ಥಗಿತಗೊಳಿಸಲು ನಿರ್ದೇಶನ ನೀಡುವುದಿಲ್ಲ ಎಂದು ತಿಳಿಸಿತ್ತು.