Advertisement

ಪ್ರಧಾನಿ ಮೋದಿ ವಿಶ್ವ ಮೆಚ್ಚಿದ ನಾಯಕ

04:53 PM Jan 11, 2021 | Team Udayavani |

ಹೊನ್ನಾಳಿ: ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರ ರಾಜ್ಯದಲ್ಲಿದ್ದ 370ನೇ ವಿಧಿ  ತೆಗೆದು ಹಾಕಿದ್ದು, ಸಿಎಎ ಜಾರಿ ಮಾಡಿದ್ದು, ತಲಾಕ್‌ ರದ್ದು ಮಾಡಿದ್ದು ಸೇರಿದಂತೆ ದೇಶಕ್ಕೆ ಒಳಿತಾಗುವ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಹಾಗಾಗಿ ಮೋದಿ ವಿಶ್ವವೇ ಮೆಚ್ಚುವ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಬಣ್ಣಿಸಿದರು.
ಗ್ರಾಪಂ ಚುನಾವಣೆಯಲ್ಲಿ ಗೆಲುವ ಸಾ ಧಿಸಿದ ಬಿಜೆಪಿ ಬೆಂಬಲಿತ ಸದಸ್ಯರಿಗೆ ಪಟ್ಟಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಅಭಿವೃದ್ಧಿಗೆ ಅಹರ್ನಿಶಿ ಶ್ರಮಿಸುತ್ತಿರುವ ಪ್ರಧಾನಿ ಮೋದಿ ಕೈ ಬಲಪಡಿಸಲು ಎಲ್ಲರೂ ಸಹಕರಿಸಬೇಕೆಂದರು.

Advertisement

ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳಲ್ಲಿ ಅತಿ ಹೆಚ್ಚು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದು ದೊಡ್ಡ ಸಾಧನೆ. ಇಲ್ಲಿ ಸೇರಿರುವ ಗೆಲುವ ಸಾಧಿಸಿದ ಗ್ರಾಪಂ ಸದಸ್ಯರುಗಳು ಹಾಗೂ ಕಾರ್ಯಕರ್ತರೇ ಇದಕ್ಕೆ ಸಾಕ್ಷಿ ಎಂದು ಹೇಳಿದರು.

ಶಾಸಕ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಕೋವಿಡ್‌ ಅವಧಿಯಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನಾದ್ಯಂತ ಸಂಚರಿಸಿ ಜನರಿಗೆ ಅವಶ್ಯವಾಗಿರುವ ಮಾಸ್ಕ್, ಔಷಧ , ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದ್ದೇನೆ. ಕಾಂಗ್ರೆಸ್‌ ಮುಖಂಡರು ಕೋವಿಡ್‌ ಸಮಯದಲ್ಲಿ ಹೊರ ಬರದೆ ಈಗ ಹೊರ ಬಂದು ಮಾತನಾಡುತ್ತಿದ್ದಾರೆ ಎಂದು ಕುಟುಕಿದರು.

ನನಗೆ 70ಕ್ಕಿಂತ ಹೆಚ್ಚು ವರ್ಷ ವಯಸ್ಸಾಗಿದ್ದರಿಂದ ಹೊರ ಬರುವುದಿಲ್ಲ ಎಂದು ಹೇಳಿದ್ದ ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಈಗ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ. ರೇಣುಕಾಚಾರ್ಯ ಭ್ರಷ್ಟಾಚಾರ ಮಾಡುತ್ತಿದ್ದಾರೆ, ಎಲ್ಲಾ ಭ್ರಷ್ಟಾಚಾರಗಳನ್ನು ಹೊರ ತರುತ್ತೇನೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಇದಕ್ಕೆಲ್ಲಾ ಸೊಪ್ಪು ಹಾಕುವ ವ್ಯಕ್ತಿ ನಾನಲ್ಲ. ನನ್ನ ಮುಖ್ಯ ಗುರಿ ತಾಲೂಕುಗಳ ಅಭಿವೃದ್ಧಿ ಮಾತ್ರ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್‌ ಮಾತನಾಡಿ, ಹೊನ್ನಾಳಿ ಪಟ್ಟಣದಲ್ಲಿ 60 ಕೋಟಿ ರೂ. ವೆಚ್ಚದ ಒಳಚರಂಡಿ ಕಾಮಗಾರಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ನ್ಯಾಮತಿ ತಾಲೂಕಿಗೆ 40 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ವ್ಯವಸ್ಥೆ ಮಾಡಲಾಗಿದೆ. ಶಾಸಕ ರೇಣುಕಾಚಾರ್ಯ ಕೇಳಿರುವ ಎಲ್ಲಾ ಕಾಮಗಾರಿಗಳಿಗೆ ಮಂಜೂರಾತಿ ನೀಡುವುದಾಗಿ ತಿಳಿಸಿದರು.

Advertisement

ಇದನ್ನೂ ಓದಿ:ಪಿಎಂ ಕೌಶಲ್ಯ ವಿಕಾಸ ಯೋಜನೆ ಪರಿಣಾಮಕಾರಿ ಜಾರಿ ಅಗತ್ಯ

ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್‌, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಜೀವನ್‌ ಮೂರ್ತಿ, ಸಾಬೂನು ಮಾರ್ಜಕ ನಿಗಮದ ನಿರ್ದೇಶಕ ಶಿವು ಹುಡೇದ್‌, ಬಂಜಾರ ನಿಗಮದ ನಿರ್ದೇಶಕ ಮಾರುತಿ ನಾಯ್ಕ, ಭೋವಿ ನಿಗಮದ ನಿರ್ದೇಶಕ ಅಜ್ಜಯ್ಯ, ಜಿಪಂ, ತಾಪಂ ಹಾಗೂ ಇತರ ಜನಪ್ರತಿನಿಧಿಗಳು, ಪಕ್ಷದ ಮುಖಂಡರುಗಳು ಪಾಲ್ಗೊಂಡಿದ್ದರು. ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ. ಸುರೇಶ್‌ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ತಾಪಂ, ಗ್ರಾಪಂ ಮಾಜಿ ಸದಸ್ಯರು ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಅರಕೆರೆ ನಾಗರಾಜ್‌ ಸ್ವಾಗತಿಸಿದರು. ಶಾಂತರಾಜ್‌ ಪಟೇಲ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ನೆಲಹೊನ್ನೆ ಮಂಜುನಾಥ್‌ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next