ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ(ಸೆ30)ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾತನಾಡಿದ್ದು, ‘ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ ಎಂದು ಪ್ರತಿಪಾದಿಸಿದ್ದಾರೆ.
ಪ್ರಾದೇಶಿಕ ಸ್ಥಿತಿಗಳ ಉಲ್ಬಣವನ್ನು ತಡೆಗಟ್ಟಲು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಲು ಇದು ನಿರ್ಣಾಯಕವಾಗಿದೆ ಎಂದು ಮೋದಿ ಹೇಳಿದ್ದಾರೆ.
“ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದೇನೆ. ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ. ಪ್ರಾದೇಶಿಕ ಉಲ್ಬಣವನ್ನು ತಡೆಗಟ್ಟಲು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಲು ಇದು ನಿರ್ಣಾಯಕವಾಗಿದೆ, ”ಎಂದು ಮೋದಿ X ನಲ್ಲಿ ಪೋಸ್ಟ್ ಮಾಡಿದ್ದಾರೆ.
”ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಮರುಸ್ಥಾಪನೆಗಾಗಿ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಬದ್ಧವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಸ್ರೇಲ್ ನಡೆಸಿದ ಭಾರೀ ದಾಳಿಯಲ್ಲಿ ಹೆಜ್ಬುಲ್ಲಾ ಉಗ್ರ ನಾಯಕ ನಸ್ರಲ್ಲಾ ಸೇರಿದಂತೆ ಏಳು ಉನ್ನತ ಶ್ರೇಣಿಯ ಕಮಾಂಡರ್‌ಗಳು ಹತ್ಯೆಯಾದ ಬೆನ್ನಲ್ಲೇ ಪ್ರಧಾನಿ ಮೋದಿ ಅವರ ಕರೆ ಮಹತ್ವ ಪಡೆದುಕೊಂಡಿದೆ. ಪೋಸ್ಟ್ ನಲ್ಲಿ ಪ್ರಧಾನಿ ಮೋದಿ ಯಾವುದೇ ನಿರ್ದಿಷ್ಟ ಘಟನೆಯನ್ನು ಉಲ್ಲೇಖಿಸಿಲ್ಲ.