ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳೊಂದಿಗೆ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಭಾನುವಾರ ಮಹತ್ವದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ರಾಜ್ಯಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮುಖ್ಯಮಂತ್ರಿಗಳು ಪ್ರಧಾನಿ ಮೋದಿ ಅವರಿಗೆ ವರದಿ ಸಲ್ಲಿಸಿದ್ದಾರೆ ಮತ್ತು 2024ರ ಲೋಕಸಭೆ ಚುನಾವಣೆಯ ಸಿದ್ಧತೆ ಕುರಿತು ಚರ್ಚೆ ನಡೆದಿದೆ ಎಂದು ವರದಿಯಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಅಸ್ಸಾಂ ಮುಖ್ಯಮಂತ್ರಿ ಡಾ.ಹಿಮಂತ ಬಿಸ್ವ ಶರ್ಮಾ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ನಾಗಾಲ್ಯಾಂಡ್ ಉಪಮುಖ್ಯಮಂತ್ರಿ ಯಾಂತುಂಗೋ ಪ್ಯಾಟನ್ ಸಭೆಯಲ್ಲಿ ಉಪಸ್ಥಿತರಿದ್ದರು.
ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ ಬಳಿಕ ಬಿಜೆಪಿ ಸಭೆ ಸೇರಿದ್ದು‘ಅಮೃತ ಕಾಲ’ ರಾಷ್ಟ್ರಕ್ಕೆ ಹೊಸ ದಿಕ್ಕನ್ನು ನೀಡಲಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ನೂತನ ಸಂಸತ್ ಭವನವು ದೇಶದ ದೃಷ್ಟಿಕೋನ ಮತ್ತು ನವ ಭಾರತದ ಸಂಕಲ್ಪಕ್ಕೆ ಉಜ್ವಲ ಉದಾಹರಣೆಯಾಗಬೇಕು ಎಂದು ಹೇಳಿದ್ದಾರೆ.
ಹೊಸ ಸಂಸತ್ ಭವನದ ನಿರ್ಮಾಣದಿಂದ 60,000 ಕ್ಕೂ ಹೆಚ್ಚು ಕಾರ್ಮಿಕರಿಗೆ ಉದ್ಯೋಗ ದೊರೆತಿದೆ ಮತ್ತು ಅವರ ಶ್ರಮವನ್ನು ಗೌರವಿಸಲು ಡಿಜಿಟಲ್ ಗ್ಯಾಲರಿಯನ್ನು ರಚಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.