ನವದೆಹಲಿ: ಕಳೆದ ಎರಡು ವಾರಗಳಿಂದ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಸ್ಥಿತಿಯನ್ನು ನಿರ್ಣಯಿಸಲು ಸಭೆ ನಡೆಸಿದರು.
ಕೋವಿಡ್ -19 ನ ಭೀತಿ ಇನ್ನೂ ಸಂಪೂರ್ಣವಾಗಿ ಹೋಗಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ನಾಲ್ಕು ವಾರಗಳಲ್ಲಿ ನಾಲ್ಕನೇ ಅಲೆ ತೀವ್ರಗೊಳ್ಳುವ ಸೂಚನೆ ಇದರ. ನಾಲ್ಕನೇ ಅಲೆಯನ್ನು ಎದುರಿಸಲು ಸಿದ್ಧರಾಗಬೇಕು.ನಾಲ್ಕನೇ ಅಲೆ ತಡೆಗೆ 3T ಸೂತ್ರ ಪಾಲಿಸಿ. ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ಮೆಂಟ್ ಪಾಲನೆ ಮಾಡುವಂತೆ ಸಿಎಂಗಳಿಗೆ ಪ್ರಧಾನಿ ಮೋದಿ ಖಡಕ್ ಸೂಚನೆ ನೀಡಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರಕಾರಗಳ ಜಂಟಿ ಪ್ರಯತ್ನಗಳಿಂದ ಆರೋಗ್ಯ ಮೂಲಸೌಕರ್ಯವು ಬಹಳಷ್ಟು ಸುಧಾರಿಸಿದೆ. ವೈದ್ಯಕೀಯ ಕಾಲೇಜುಗಳು, ಜಿಲ್ಲಾ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ, ಮಾನವಶಕ್ತಿಯನ್ನು ಹೆಚ್ಚಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.
ನಾವು ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್-ಸೂಕ್ತ ನಡವಳಿಕೆಯನ್ನು ಉತ್ತೇಜಿಸಬೇಕು. ಪ್ರತಿ ಅರ್ಹ ಮಗುವಿಗೆ ಬೇಗನೆ ಲಸಿಕೆ ನೀಡುವುದು ನಮ್ಮ ಆದ್ಯತೆಯಾಗಿದೆ ಎಂದರು.
ನಮ್ಮ ವಯಸ್ಕ ಜನಸಂಖ್ಯೆಯ 96% ಜನರು ಲಸಿಕೆಯ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ ಮತ್ತು 15 ವರ್ಷಕ್ಕಿಂತ ಮೇಲ್ಪಟ್ಟ ಅರ್ಹ ಜನಸಂಖ್ಯೆಯ 85% ಜನರು ಕೋವಿಡ್ -19 ಲಸಿಕೆಯ ಎರಡನೇ ಡೋಸ್ ಪಡೆದಿದ್ದಾರೆ ಎಂಬುದು ಪ್ರತಿಯೊಬ್ಬ ನಾಗರಿಕರಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಸಭೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಎಲ್ಲಾ ರಾಜ್ಯಗಳ ಸಿಎಂಗಳು, ಪ್ರಧಾನ ಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಆಯಾ ಸಚಿವಾಲಯಗಳ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.