ಕಾಸರಗೋಡು, ಮಾ.17: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 30 ರಿಂದ ಏಪ್ರಿಲ್ 2 ರವರೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈ ಮಧ್ಯೆ ಕನ್ಯಾಕುಮಾರಿಗೂ ಪ್ರಚಾರಾರ್ಥವಾಗಿ ತೆರಳಲಿದ್ದಾರೆ.
ಇದನ್ನೂ ಓದಿ:ಬೈಕ್ ಮೇಲೆ ಸ್ಟಂಟ್ ಮಾಡಿದ ಯುವತಿಯರಿಗೆ 28000 ರೂ. ದಂಡ
ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾ.24, 25 ಮತ್ತು ಏಪ್ರಿಲ್ 3 ರಂದು ಕೇರಳದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಾ.27 ಮತ್ತು 31 ರಂದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾ.27 ರಂದು, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಸ್ಮೃತಿ ಇರಾನಿ, ನಟಿ ಖುಷ್ಬು, ಮಾ.28 ರಂದು, ನಟಿ ವಿಜಯ್ ಶಾಂತಿ ಮಾ.21 ರಿಂದ 31 ರ ವರೆಗೆ ಕೇರಳದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಕೇರಳದಲ್ಲಿ ಬಿಜೆಪಿಗೆ ಮೋದಿ, ಶಾ ಸ್ಟಾರ್ ಪ್ರಚಾರಕರು:
ಕೇರಳದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಪ್ರಭಾವಿ ನಾಯಕರಿಲ್ಲದ ಪರಿಣಾಮ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದಲ್ಲಿ ನಡೆಯಲಿರುವ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗಿಯಾದರೆ ಪಕ್ಷ ಇನ್ನಷ್ಟು ಬಲಿಷ್ಠವಾಗಲಿದೆ ಎಂಬುದು ಪಕ್ಷದ ಲೆಕ್ಕಾಚಾರವಾಗಿದೆ.
ಕಳೆದ ವರ್ಷ ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರು 12 ರಾಲಿಗಳಲ್ಲಿ ಪ್ರಚಾರ ಕಾರ್ಯ ನಡೆಸಿದ ಪರಿಣಾಮ ಭಾರತೀಯ ಜನತಾ ಪಕ್ಷಕ್ಕೆ ದೊಡ್ಡ ಗೆಲುವು ಸಾಧಿಸಲು ದಾರಿ ಮಾಡಿಕೊಟ್ಟಿದೆ ಎಂಬುದು ಬಿಜೆಪಿ ಮುಖಂಡರ ವಾದವಾಗಿದೆ. ಈ ಹಿನ್ನೆಲೆಯಲ್ಲಿ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಸ್ಟಾರ್ ಪ್ರಚಾರಕರಾಗಲಿದ್ದಾರೆ ಎಂದು ವರದಿ ತಿಳಿಸಿದೆ.