ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲು ನಡೆಸಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ.
ಸೋಮವಾರ ಈ ಕುರಿತು ಮಾಹಿತಿ ನೀಡಿರುವ ಪ್ರಧಾನಿ ಕಚೇರಿ ಏಪ್ರಿಲ್ 8 ರಂದು ದೇಶದ ವಿವಿಧ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದೆ.
ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೋವಿಡ್ -19 ಪ್ರಕರಣಗಳು ಏರುಗತಿಯಲ್ಲಿ ದಾಖಲಾಗುತ್ತಿವೆ. ಅದರಲ್ಲೂ ಮಹಾರಾಷ್ಟ್ರ ಹಾಗೂ ಪಂಜಾಬ್, ರಾಜಸ್ಥಾನ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೋವಿಡ್ ಪಿಡುಗು ಜಾಸ್ತಿಯಾಗುತ್ತಿದೆ. ಈ ಹಿನ್ನೆಲೆ ಮೋದಿಯವರು ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ.
ಭಾನುವಾರ (ಏಪ್ರಿಲ್.4) ನಡೆದ ಸಭೆಯಲ್ಲಿ ಮಹಾರಾಷ್ಟ್ರ,ಪಂಜಾಬ್ ಹಾಗೂ ಛತ್ತೀಸ್ ಗಢ ರಾಜ್ಯಗಳಿಗೆ ಅಧಿಕಾರಿಗಳ ನಿಯೋಗ ಕಳುಹಿಸಿ ಕೊಡಲು ಕೇಂದ್ರ ನಿರ್ಧರಿಸಿದೆ. ಈ ಮೂರು ರಾಜ್ಯಗಳಲ್ಲಿ ಕೋವಿಡ್ ಕೇಸ್‍ಗಳ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಟೆಸ್ಟಿಂಗ್, ಟ್ರ್ಯಾಕಿಂಗ್, ಟ್ರೀಟ್ಮೆಂಟ್ ಹಾಗೂ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಪ್ರಧಾನಿ ಮೋದಿಯವರು ಸೂಚಿಸಿದ್ದಾರೆ.
ಇನ್ನು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಕೂಡ 11 ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರ ಜೊತೆ ನಾಳೆ ( ಮಂಗಳವಾರ, ಏ.6) ಸಭೆ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.