ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ತಾರಕಕ್ಕೇರಿದ್ದು, ಏತನ್ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಮಾರ್ಚ್ 07) ಉಕ್ರೇನ್ ಅಧ್ಯಕ್ಷ ವೋಲೋದಿಮಿರ್ ಝೆಲೆನ್ ಸ್ಕಿ ಅವರ ಜತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ಯುದ್ದಗ್ರಸ್ತ ಉಕ್ರೇನ್ ನಿಂದ ಭಾರತೀಯರನ್ನು ಸ್ಥಳಾಂತರಿಸಲು ಸಹಕರಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
ಅಷ್ಟೇ ಅಲ್ಲ ಇನ್ನುಳಿದ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಉಕ್ರೇನ್ ಬೆಂಬಲದ ಅಗತ್ಯವಿದೆ ಎಂದು ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಝೆಲೆನ್ ಸ್ಕಿ ಅವರಲ್ಲಿ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಯುದ್ಧಪೀಡಿತ ಉಕ್ರೇನ್ ಅಧ್ಯಕ್ಷ ವೋಲೋದಿಮಿರ್ ಝೆಲೆನ್ ಸ್ಕಿ ಅವರ ಜತೆ ಸುಮಾರು 35 ನಿಮಿಷಗಳ ಕಾಲ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ಉಕ್ರೇನ್ ಯುದ್ಧ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿರುವುದಾಗಿ ಸರ್ಕಾರದ ಮೂಲಗಳು ತಿಳಿಸಿವೆ.
ಉಕ್ರೇನ್ ನಿಂದ ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ದೇಶದ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಝೆಲೆನ್ ಸ್ಕಿ ಅವರ ಸರ್ಕಾರ ನೀಡಿರುವ ಸಹಕಾರಕ್ಕೆ ಪ್ರಧಾನಿ ಮೋದಿ ಅವರು ಅಭಿನಂದನೆ ಸಲ್ಲಿಸಿರುವುದಾಗಿ ವರದಿ ಹೇಳಿದೆ.
ಅದೇ ರೀತಿ ಉಕ್ರೇನ್ ನ ಸುಮಿಯಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರಕ್ಕೆ ಉಕ್ರೇನ್ ಸರ್ಕಾರ ಸಹಕಾರ ನೀಡಬೇಕು ಎಂದು ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಝೆಲೆನ್ ಸ್ಕಿ ಬಳಿ ವಿನಂತಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.