ಹುಣಸೂರು: ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದ ವೇಳೆ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಶ್ರಮ್ ಯೋಗಿ ಮಾನ್-ಧನ್ (ಪಿಎಂಎಸ್‌ವೈಎಂ) ಎಂಬ ಮಹತ್ವಾಕಾಂಕ್ಷೆಯ ಸಾರ್ವಜನಿಕ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ನ್ಯಾಯಾಧೀಶೆ ಜಿ.ದೀಪಾ ತಿಳಿಸಿದರು.
ನ್ಯಾಯಲಯ ಆವರಣದಲ್ಲಿ ಕಾರ್ಮಿಕ ಇಲಾಖೆಯ ಕಾನೂನು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದೆ.
ನಮ್ಮ ದೈನಂದಿನ ಜೀವನದಲ್ಲಿ ಗೃಹ ಆಧಾರಿತ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧಪಡಿಸುವವರು, ಹಮಾಲಿಗಳು, ಇಟ್ಟಿಗೆ-ಭಟ್ಟಿಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸ ನಿರ್ವಹಿಸುವವರು, ಕೈಮಗ್ಗ ಕಾರ್ಮಿಕರು, ಚರ್ಮೋದ್ಯಮದ ಕಾರ್ಮಿಕರು, ಧ್ವನಿ ಮತ್ತು ದೃಶ್ಯ ಕಾರ್ಮಿಕರು ಇತರೆ ಉದ್ಯೋಗದ ಕೆಲಸಗಾರರು ಅಸಂಘ ಟಿತ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಎಲ್ಲಾ ಕ್ಷೇತ್ರಗಳ ಕಾರ್ಮಿಕರು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳ ಬೇಕು ಎಂದು ಸಲಹೆ ನೀಡಿದರು.
ಕಾರ್ಮಿಕ ನಿರೀಕ್ಷಕ ಲಕ್ಷ್ಮೀಶ್ ಮಾತನಾಡಿ, ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ ಕಾಮನ್ ಸರ್ವಿಸ್ ಸೆಂಟರ್‌ಗಳಲ್ಲಿ ಯೋಜನೆಯಡಿ ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಬೇಕು ಎಂದರು.
ಈ ವೇಳೆ ವಕೀಲರ ಸಂಘದ ಅಧ್ಯಕ್ಷ ಯೋಗಣ್ಣೇಗೌಡ, ಡಿಇಒ ರಾಜೇಶ್, ಡಿಇಒ ಪ್ರಮೋದ್, ಕಾರ್ಮಿಕ ಬಂಧು ಯೋಜನೆಯ ಪ್ರಸಾದ್, ಮಂಜುನಾಥ್, ಶಿವರಾಮು ಇತರರಿದ್ದರು.