ಮೈಸೂರು: ಚಾಮರಾಜನಗರ ಜಿಲ್ಲೆಯ ಸುಳುವಾಡಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವನೆಯಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಶನಿವಾರ 17ಕ್ಕೆ ಏರಿಕೆಯಾಗಿದೆ.
ಘಟನೆಯಲ್ಲಿ ಅಸ್ವಸ್ಥಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹನೂರಿನ ದೊರೆಸ್ವಾಮಿ ಮೇಡು ನಿವಾಸಿ ರಂಗನ್ (45) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಡಿಸೆಂಬರ್ 14 ರಂದು ಆಸ್ಪತ್ರೆಗೆ ದಾಖಲಾಗಿದ್ದರಿಂದ ಚಿಂತಾಜನಕ ಸ್ಥಿತಿಯಲ್ಲೇ ಇದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.
ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದ ಮಕ್ಕಳು ಸೇರಿದಂತೆ 31 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 44 ಮಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಮಾರಮ್ಮ ದೇವಾಲಯದ ಗೋಪುರ ನಿರ್ಮಾಣ ಸಂಬಂಧ ಮತ್ತು ಟ್ರಸ್ಟಿಗಳ ನಡುವಿನ ಹಣಕಾಸು ವ್ಯವಹಾರದ ಮೈಮನಸ್ಸಿನಿಂದಾಗಿ ಕಳೆದ ಶುಕ್ರವಾರ (ಡಿ.14)ರಂದು ಪ್ರಸಾದಕ್ಕೆ ವಿಷ ಬೆರೆಸಲಾಗಿತ್ತು.
ಪ್ರಸಾದಕ್ಕೆ ವಿಷ ಬೆರೆಸಿದ ಪ್ರಮುಖ ಆರೋಪಿಗಳಾದ ಇಮ್ಮಡ ಮಹದೇವ ಸ್ವಾಮಿ, ಮಾದೇಶ,ದೊಡ್ಡಯ್ಯ ಮತ್ತು ಅಂಬಿಕಾ ಎನ್ನುವ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ತೀವ್ರಗೊಳಿಸಿದ್ದಾರೆ.