ಬೆಂಗಳೂರು: ಮನೆ ಮುಂದೆ, ಕಚೇರಿ ಎದುರು ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ ಇಬ್ಬರನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿ ವಿನೋಬಾ ನಗರದ ಶೇಖ್ ಮುದಾಸೀರ್ ಅಹಮ್ಮದ್ ಅಲಿಯಾಸ್ ಮುದ್ದು (33) ಮತ್ತು ಶಿವಾಜಿನಗರ ಬ್ರಾಡ್ ವೇ ರಸ್ತೆಯ ಸೈಯದ್ ನಾಜೀಮ್ ಅಲಿಯಾಸ್ ಡ್ಯಾನಿ (25) ಇವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 2.37 ಲಕ್ಷ ರೂ. ಮೌಲ್ಯದ ಮೂರು ವಾಹನಗಳನ್ನು ವಶಪಡಿಸಿಕೊಂಡಿದ್ದು, ಸಂಪಿಗೆಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದ ಮೂರು ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದರು.
ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ಬಡಾವಣೆಯಲ್ಲಿ ಫೆ.28ರಂದು ಮನೆ ಬಳಿ ನಿಲ್ಲಿಸಿದ್ದ ದ್ವಿಚಕ್ರವಾಹನ ಕಳ್ಳತನ ವಾಗಿದ್ದು, ಇದಕ್ಕೆ ಸಂಬಂಧಿಸಿದ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಾರ್ಯಾಚರಣೆ ಕೈಗೊಂಡ ನಂತರ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳು ವೃತ್ತಿಪರ ಕಳ್ಳರಾಗಿದ್ದು, ಮನೆ ಎದುರು, ಪಾರ್ಕಿಂಗ್ ಸ್ಥಳಗಳು, ಕಚೇರಿಗಳ ಎದುರು ನಿಲುಗಡೆ ಮಾಡಿದ ದ್ವಿಚಕ್ರವಾಹನ ಗಳನ್ನು ಗಮನಿಸಿ, ರಾತ್ರಿ ವೇಳೆ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡಿ ಪರಾರಿಯಾಗುತ್ತಿದ್ದರು.
ನಂತರ ಗಿರಾಕಿಗಳನ್ನು ಹುಡುಕಿ ಮಾರಾಟ ಮಾಡಿ ಹಣ ಪಡೆಯುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಹಿಂದೆ ಆರೋಪಿಗಳು ಭಾರತಿನಗರ, ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್, ಕಬ್ಬನ್ ಪಾರ್ಕ್, ಉಪ್ಪಾರಪೇಟೆ, ಮಾರತ್‌ಹಳ್ಳಿ, ಶೇಷಾ ದ್ರಿಪುರಂ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿನ ಅಪರಾಧಗಳಲ್ಲಿ ಭಾಗಿ ಯಾಗಿದ್ದ ಈ ಆರೋಪಿಗಳ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಕೆಲ ಪ್ರಕರಣಗಳಲ್ಲಿ ಜೈಲು ಸೇರಿದ್ದ ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ಅದೇ ಕೆಲಸವನ್ನು ಮುಂದುವರಿಸಿದ್ದಾರೆ ಎಂದರು.