ಬೆಳಗಾವಿ : ಎಸ್ಎಸ್ಎಲ್ ಸಿ ಪರೀಕ್ಷೆ ರದ್ದತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ ಮಾಡಲು ಬರುತ್ತಿದ್ದ ಕನ್ನಡ ಚಳುವಳಿಗಾರ ವಾಟಾಳ್ ನಾಗರಾಜ್ ಅವರನ್ನು ಹಿರೇಬಾಗೇವಾಡಿ ಟೋಲ್ ಬಳಿ ತಡೆದ ಪೋಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಸುವರ್ಣ ಸೌಧದ ಮುಂಭಾಗದಲ್ಲಿ ಧರಣಿ ನಡೆಸಲು ಕಾರಿನಲ್ಲಿ ಬರುತ್ತಿದ್ದ ವಾಟಾಳ್ ನಾಗರಾಜ್ ಅವರನ್ನು ಹಿರೇಬಾಗೇವಾಡಿ ಟೋಲ್‌ಗೇಟ್ ಬಳಿಯೇ ಪೋಲೀಸರು ವಶಕ್ಕೆ ಪಡೆದರು.
ಈ ಸಂಧರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ಹತ್ತನೇ ತರಗತಿ ಮತ್ತು ಪದವಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು, 9 ಲಕ್ಷ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಜೀವದ ಜೊತೆಗೆ ಚೆಲ್ಲಾಟ ಬೇಡ, ವಿದ್ಯಾರ್ಥಿಗಳು ಭಯದಿಂದಲೇ ಪಿಯುಸಿ ಇಂಗ್ಲೀಷ್ ಪರೀಕ್ಷೆ ಬರೆದಿದ್ದಾರೆ ಎಂದರು.
ದೇಶದ 12 ರಾಜ್ಯಗಳಲ್ಲಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ. ಅದೇ ರೀತಿ ಕರ್ನಾಟಕದಲ್ಲೂ ಪರೀಕ್ಷೆ ರದ್ದು ಮಾಡಬೇಕೆಂದು ಒತ್ತಾಯಿಸಿದರು.
ಸುವರ್ಣ ಸೌಧದ ಬಳಿ ಧರಣಿಗೆ ಪೊಲೀಸರು ಅವಕಾಶ ನೀಡಲಿಲ್ಲ. ಕಾರಣ ಇದೇ ತಿಂಗಳು 23 ರಂದು ಶಿಕ್ಷಣ ಸಚಿವ ಸುರೇಶಕುಮಾರ ಮನೆ ಮುಂದೆ ಧರಣಿ ಮಾಡುತ್ತೇನೆ. ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಮುಂದೆ ಧರಣಿ ನಡೆಸಲಾಗುವುದು ಎಂದು ವಾಟಾಳ್ ನಾಗರಾಜ ಹೇಳಿದರು.