ಮಂಡ್ಯ : ನಾಗಮಂಗಲದಲ್ಲಿ ಗಣೇಶ ವಿಗ್ರಹ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಶುಕ್ರವಾರ(ಸೆ 13) ಮತ್ತೆ ಮೂವರು ಅರೋಪಿಗಳನ್ನು ಬಂಧಿಸಲಾಗಿದ್ದು, ಕರ್ತವ್ಯ ಲೋಪ ಎಸಗಿದ್ದಕ್ಕಾಗಿ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ.
ಬುಧವಾರ ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಹಲವಾರು ಅಂಗಡಿಗಳು ವಾಹನಗಳನ್ನು ಸುತ್ತು ಹಾಕಿದ್ದರು. ಉದ್ವಿಗ್ನತೆಗೆ ಕಾರಣವಾದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮೆರವಣಿಗೆ ವೇಳೆ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪವೆಸಗಿದ ಕಾರಣಕ್ಕಾಗಿ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಗುರುವಾರ ಸಂಜೆ ಅಮಾನತು ಮಾಡಲಾಗಿದೆ ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
ಪರಿಸ್ಥಿತಿ ಶಾಂತಿಯುತವಾಗಿದ್ದರೂ, ನಗರದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ, ಅಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 14 ರವರೆಗೆ ನಾಲ್ಕಕ್ಕಿಂತ ಹೆಚ್ಚು ಜನರು ಗುಂಪುಗೂಡುವುದಕ್ಕೆ ನಿರ್ಬಂಧ ವಿಧಿಸಿ ನಿಷೇಧಾಜ್ಞೆ ವಿಧಿಸಲಾಗಿದೆ.
ಮೂವರ ಬಂಧನಗಳೊಂದಿಗೆ, ಪ್ರಕರಣದಲ್ಲಿ ಬಂಧಿತರಾಗಿರುವ ಒಟ್ಟು ಆರೋಪಿಗಳ ಸಂಖ್ಯೆ ಈಗ 55 ಕ್ಕೇರಿದೆ.ಆರಂಭದಲ್ಲಿ ಬಂಧಿತರಾದ 52 ಜನರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಘಟನೆಗೆ ಸಂಬಂಧಿಸಿ ಇದುವರೆಗೆ 18 FIR ದಾಖಲು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.