ಬೆಂಗಳೂರು: 2024ನೇ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಕೆಲವು ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಲಿದೆ ಎಂಬ ಊಹಾಪೋಹದ ನಡುವೆಯೇ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜನತೆಗೆ ಧನ್ಯವಾದ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:Arms License Case: ಗ್ಯಾಂಗ್ ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಡಿವಿಎಸ್ ಗೆ ಟಿಕೆಟ್ ನಿರಾಕರಿಸಲಾಗಿದೆ ಎಂಬ ವದಂತಿಯ ನಡುವೆ ಸದಾನಂದ ಗೌಡರು ತಮ್ಮ ಎಕ್ಸ್ ಖಾತೆಯಲ್ಲಿ,
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ 10 ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದ ಮಾಡಿದ್ದೀರಿ. ನಾನು ನನ್ನ ಶಕ್ತಿ ಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜತೆ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡಾ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ಎಲ್ಲರಿಗೂ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು” ಎಂದು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಡಿ.ವಿ.ಸದಾನಂದ ಗೌಡರನ್ನು ದೂರವಾಣಿ ಮೂಲಕ ಸಂಪರ್ಕಿಸಿರುವ ಬಿಜೆಪಿ ಹೈಕಮಾಂಡ್ ಈ ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಬೇರೆ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿರುವುದಾಗಿ ವರದಿ ಹೇಳಿದೆ.
ವದಂತಿ ಹಾಗೂ ಡಿವಿ ಎಸ್ ಟ್ವೀಟ್ ಬಳಿಕ ಇದೀಗ ರಾಜಕೀಯ ವಲಯದಲ್ಲಿ ಬಹುತೇಕ ಊಹಾಪೋಹದಂತೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆ ಅಭ್ಯರ್ಥಿಯಾಗುವ ಸಾಧ್ಯತೆ ಇದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಅಚ್ಚರಿಯ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.