ಬೆಳಗಾವಿ: ಬಿಜೆಪಿ ಹಾಗೂ ಕಾಂಗ್ರೆಸ್ ಟಿಕೆಟ್ ಹಂಚಿಕೊಂಡಿರುವ ಜಾರಕಿಹೊಳಿ ಸಹೋದರರ ವಿರುದ್ಧ ತೊಡೆ ತಟ್ಟಲು ಅಶೋಕ ಪೂಜಾರಿ ಅವರು ಜೆಡಿಎಸ್‌ದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚುನಾವಣೆ ನಿಲ್ಲದೇ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರನ್ನು ಬೆಂಬಲಿಸುವಂತೆ ಬಿಜೆಪಿ ನಾಯಕರು ಅಂಗಲಾಚಿದರೂ ಅಶೋಕ ಸುತಾರಾಮ ಒಪ್ಪುತ್ತಿಲ್ಲ.
ಶನಿವಾರ ರಾತ್ರಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ, ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಸ್ವತಃ ಪೂಜಾರಿ ಮನೆಗೆ ಹೋಗಿ ಮಾತುಕತೆ ನಡೆಸಿದರೂ ಪೂಜಾರಿ ಕೇಳಲಿಲ್ಲ.
ನ. 148ರಂದು ಸೋಮವಾರ ನಾಮಪತ್ರವನ್ನು ಜೆಡಿಎಸ್ ಸಲ್ಲಿಸುವ ಬಗ್ಗೆ ಅಶೋಕ ಪೂಜಾರಿ ಯೋಚನೆ ನಡೆಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮ,ಆಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪೂಜಾರಿ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾಗುತ್ತಿದ್ದು, ಸೋಮವಾರ ನಾಮಪತ್ರ ಸಲ್ಲಿಸುವ ವೇಳೆ ಕುಮಾರಸ್ವಾಮಿ ಬರುವುದಾಗಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ವಿಜಯಪುರ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರು ಅಶೊಕ ಪೂಜಾರಿ ಮನೆಗೆ ಹೋಗಿ ಮನವೊಲಿಸಲು ಪ್ರಯತ್ನಿಸಿದರೂ ವಿಫಲವಾಗಿದೆ. ಬೆಳಗ್ಗೆಯಿಂದ ಪೂಜಾರಿ ಮನೆ ಎದುರು ಅವರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ಜಾರಕಿಹೊಳಿ ಸಹೋದರರ ವಿರುದ್ಧ ಸ್ಪರ್ಧಿಸುವಂತೆ ಪಟ್ಟು ಹಿಡಿದಿದ್ದಾರೆ.