ಬೆಂಗಳೂರು: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ವಿಚಾರದಲ್ಲಿ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಇಂಧನ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ರೈತರು ಕೃಷಿ ಚಟುವಟಿಕೆ ಪ್ರಾರಂಭಿಸಿರುವುದರಿಂದ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.
ವಿದ್ಯುತ್ ಉತ್ಪಾದನೆಗೆ ಸಂಬಂಧಿಸಿದ ಯೋಜನೆಗಳು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ರಾಜ್ಯದ ಪ್ರಸ್ತುತ ವಿದ್ಯುತ್ ಪರಿಸ್ಥಿತಿ, ಒಟ್ಟು ಬೇಡಿಕೆ ಹಾಗೂ ಉತ್ಪಾದನೆ, ವಿದ್ಯುತ್ ಉತ್ಪಾದನಾ ಘಟಕಗಳ ಸ್ಥಿತಿಗತಿ, ಚಾಲ್ತಿಯಲ್ಲಿರುವ ಯೋಜನೆಗಳ ಪ್ರಗತಿ ಬಗ್ಗೆ ಸಮಗ್ರ ಮಾಹಿತಿ ಪಡೆದರು. ಸೌರ ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯ ಈಗಾಗಲೇ 2022 ರ ಉತ್ಪಾದನಾ ಸಾಮರ್ಥ್ಯದ ಗುರಿ ತಲುಪಿದೆ. ಇತರ ನವೀಕರಿಸಬಹುದಾದ ಇಂಧನಗಳ ಉತ್ಪಾದನೆಯಲ್ಲೂ ಶೀಘ್ರವೇ ನಿಗದಿತ ಗುರಿ ಸಾಧಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಯಲಹಂಕದಲ್ಲಿ ಅನಿಲ ಆಧಾರಿತ 370 ಮೆ.ವ್ಯಾ ವಿದ್ಯುತ್ ಘಟಕ ಸ್ಥಾಪನೆ, ಶಿವನಸಮುದ್ರದಲ್ಲಿ “ರನ್ ಆಫ್ ದಿ ರಿವರ್’ ಯೋಜನೆ ಜಾರಿ ಸೇರಿ ಒಟ್ಟು 10 ಕ್ಕೂ ಹೆಚ್ಚು ವಿದ್ಯುತ್ ಉತ್ಪಾದನಾ ಘಟಕಗಳ ಸ್ಥಾಪನೆ ಹಾಗೂ ಕಾರ್ಯ ನಿರ್ವಹಣೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಜತೆಗೆ ಕೇಂದ್ರ ಸರ್ಕಾರ ರೂಪಿಸಿರುವ ಇಂಧನ ನೀತಿಗೆ ಅನುಗುಣವಾಗಿ ರಾಜ್ಯದ ವಿದ್ಯುತ್ ಯೋಜನೆಗಳನ್ನು ಪರಿಷ್ಕೃತಗೊಳಿಸಿ ಜಾರಿಗೊಳಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.
ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಕಾರ್ಯದರ್ಶಿ ಸೆಲ್ವಕುಮಾರ್, ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಕುಮಾರ ನಾಯಕ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಸಭೆಯಲ್ಲಿ ಭಾಗವಹಿಸಿದ್ದರು.