Advertisement

ದೀಪಾಲಂಕಾರಕ್ಕೆ ಕುಮಾರಸ್ವಾಮಿಯಿಂದ ವಿದ್ಯುತ್ ಕಳ್ಳತನ? ಕಾಂಗ್ರೆಸ್ ಆರೋಪಕ್ಕೆ HDK ತಿರುಗೇಟು

12:41 PM Nov 14, 2023 | Team Udayavani |

ಬೆಂಗಳೂರು: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಜೆಪಿ ನಗರದ ಮನೆಗೆ ದೀಪಾವಳಿಯ ಅಲಂಕಾರಕ್ಕಾಗಿ ವಿದ್ಯುತ್ ಕಂಬದಿಂದಲೇ ನೇರವಾಗಿ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅಲ್ಲದೆ ಅದರ ವಿಡಿಯೋವೊಂದನ್ನು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.

Advertisement

ಎಚ್ ಡಿಕೆ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕಾಂಗ್ರೆಸ್, ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಛೇಡಿಸಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ ಅವರು, ಖಾಸಗಿ ಡೆಕೋರೇಟರ್ ಒಬ್ಬರು ಮಾಡಿದ ಕೆಲಸ ಇದಾಗಿದ್ದು, ನನ್ನ ಗಮನಕ್ಕೆ ಬಂದ ಕೂಡಲೇ ಸರಿಪಡಿಸಿದ್ದೇನೆ. ಬೆಸ್ಕಾಂ ಅಧಿಕಾರಿಗಳು ಬೇಕಾದರೆ ಪರೀಕ್ಷೆ ಮಾಡಲಿ, ನಾನು ದಂಡ ಕಟ್ಟುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಟೀಕೆ:  ಜಗತ್ತಿನ ಏಕೈಕ ಮಹಾ ಪ್ರಾಮಾಣಿಕ ಎಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ! ಎಚ್ ಡಿ ಕುಮಾರಸ್ವಾಮಿ  ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ, ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ ಎಂದು ವ್ಯಂಗ್ಯವಾಡಿದೆ.

ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ ಏಳು ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು ‘ಬರ’ ಎದುರಿಸುತ್ತಿದ್ದೀರಾ? ಅದೇನೋ ಪತ್ರಿಕಾಗೋಷ್ಠಿ ನಡೆಸಿ ‘ಕರ್ನಾಟಕ ಕತ್ತಲಲ್ಲಿದೆ’ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ, ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ ಎಂದು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.

Advertisement

ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ ‘ದಿವಾಳಿ’ಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು ಎಂದು ಕಾಂಗ್ರೆಸ್ ಎಕ್ಸ್ ಜಾಲತಾಣದಲ್ಲಿ ಪ್ರಶ್ನಿಸಿದೆ.

ಕುಮಾರಸ್ವಾಮಿ ಪ್ರತಿಕ್ರಿಯೆ

ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ. ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕಾಂಗ್ರೆಸ್ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ ಎಂದಿದ್ದಾರೆ.

ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next