Advertisement

ಸರಕಾರದ ಯೋಜನೆಗೆ ಫಲಾನುಭವಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಿ; ಪ್ರಹ್ಲಾದ ಜೋಶಿ

06:04 PM Jul 28, 2020 | sudhir |

ಧಾರವಾಡ : ಕೇಂದ್ರ ಸರಕಾರದ ಪುರಸ್ಕ್ರತ ಯೋಜನೆಗಳಿಗೆ ಫಲಾನುಭವಿಗಳನ್ನು ಅರ್ಹತೆ ಮಾನದಂಡಗಳಿಗೆ ಅನುಗುಣವಾಗಿ ಪಾರದರ್ಶಕತೆಯಿಂದ ಆಯ್ಕೆ ಮಾಡಲು ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ವಿಶೇಷ ಪ್ರಯತ್ನ ಮಾಡಬೇಕು. ಬ್ರಷ್ಟಾಚಾರ, ಯಾವುದೇ ರೀತಿಯ ಒತ್ತಡಗಳಿಗೆ ಅವಕಾಶ ಮಾಡದೆ ನಿಯಮಾನುಸಾರ ಕಾರ್ಯಕ್ರಮಗಳ ಅನುಷ್ಠಾನವಾಗಬೇಕೆಂದು ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು, ಗಣಿ ಸಚಿವರು ಹಾಗೂ ದಿಶಾ ಸಮಿತಿಯ ಅಧ್ಯಕ್ಷರು ಆಗಿರುವ ಪ್ರಹ್ಲಾದ ಜೋಶಿ ಹೇಳಿದರು.

Advertisement

ಅವರು ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವೆಬೆಕ್ಸ್ ಮೂಲಕ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ಕೇಂದ್ರ ಪುರಸ್ಕøತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ಪ್ರಧಾನಮಂತ್ರಿ ಆವಾಸ ಯೋಜನೆ, ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಆತ್ಮ ನಿರ್ಭರ ಯೋಜನೆ, ಸ್ವಚ್ಛ ಭಾರತ ಮಿಷನ್, ಘನ ತ್ಯಾಜ್ಯ ವಿಲೇವಾರಿ ಘಟಕಗಳ ಸ್ಥಾಪನೆ, ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ, ರಾಷ್ಟ್ರೀಯ ಕಿಸಾನ್ ಮಿಷನ್, ಸಾಮಾಜಿಕ ಭದ್ರತಾ ಯೋಜನೆಗಳು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಮತ್ತು ಪೂರ್ಣ ಪ್ರಮಾಣದಲ್ಲಿ ಜಾರಿಯಾಗುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು.

ಎಂ.ಜಿ.ಎನ್.ಆರ್.ಇ.ಜಿ, ವಸತಿ ಯೋಜನೆಗಳಲ್ಲಿ ಕೇಂದ್ರ ಸರಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಬ್ರಷ್ಟಾಚಾರ, ಯಾವುದೇ ರೀತಿಯ ಒತ್ತಡಗಳಿಗೆ ಅವಕಾಶ ಮಾಡುವ ಮತ್ತು ತಪ್ಪು ಮಾಹಿತಿ ದಾಖಲಿಸಿ ಯೋಜನೆಗಳ ಲಾಭ ಅನರ್ಹರಿಗೆ ತಲುಪಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸಚಿವ ಪ್ರಹ್ಲಾದ ಜೋಶಿ ಅವರು ಜಿಲ್ಲಾಧಿಕಾರಿಗಳಿಗೆ ಮತ್ತು ಸಿಇಓ ಅವರಿಗೆ ಸೂಚಿಸಿದರು.

ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಗ್ರಾಮಸಭೆ ಮತ್ತು ವಾರ್ಡ್ ಸಭೆಗಳಲ್ಲಿ ಆಯ್ಕೆ ಮಾಡಬೇಕಿದ್ದು, ಸಭೆಗಳು ಪರಿಣಾಮಕಾರಿಯಾಗಿ ನಡೆದಲ್ಲಿ ಯಾವುದೇ ರೀತಿಯ ತಪ್ಪುಗಳು ಆಗದೆ ನಿಯಮಾನುಸಾರ ಜನರ ಮುಂದೆ ಫಲಾನುಭವಿಗಳ ಆಯ್ಕೆಗೆ ಸಾಧ್ಯವಾಗುತ್ತದೆ. ಆದ್ದರಿಂದ ಗ್ರಾಮಸಭೆಗಳು ಕಡ್ಡಾಯವಾಗಿ ಮತ್ತು ಅರ್ಥಪೂರ್ಣವಾಗಿ ಜರುಗಲು ತಾಲೂಕಾ ಇಓಗಳನ್ನು ಮತ್ತು ವಿಶೇಷ ಅಧಿಕಾರಿಗಳನ್ನು ನೇಮಿಸಿ ಕ್ರಮಕೈಗೊಳ್ಳಬೇಕೆಂದು ಸಚಿವರು ತಿಳಿಸಿದರು.

Advertisement

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ವೈದ್ಯಕೀಯ ಸೌಲಭ್ಯ ಹೊಂದಲು ಅನುಕೂಲವಾಗುವಂತೆ ವಿವಿಧ ಕಂಪನಿ, ಕೈಗಾರಿಕೆಗಳಿಗೆ ಸಿಎಸ್‍ಆರ್ ನಿಧಿಯಲ್ಲಿ ಸಹಾಯ ಮಾಡಲು ಸೂಚಿಸಿದ್ದು, ಜಿಲ್ಲಾಡಳಿತ ಅವರೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ನೆರವು ಪಡೆಯಬೇಕೆಂದು ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯವಿರುವ ಭೂಮಿ ಹಾಗೂ ಇತರ ಸಹಕಾರ ನೀಡಲಾಗುತ್ತಿದೆ. ಸಾಮಾಜಿಕ ಭದ್ರತಾ ಯೋಜನೆಗಳಿಗೆ ಫಲಾನುಭವಿಗಳಿಂದ ವಾಟ್ಸಾಆಪ್ ಮೂಲಕ ಅರ್ಜಿ ಸ್ವೀಕರಿಸಿ ತಕ್ಷಣ ಅನುಮೋದಿಸಲಾಗುತ್ತಿದೆ. ಪ್ರತಿ ತಾಲೂಕಿಗೆ ಪ್ರತ್ಯೇಕ ವಾಟ್ಸ್‍ಆಪ್ ನಂಬರಗಳಿದ್ದು. ಸಾರ್ವಜನಿಕರ ಮಾಹಿತಿಗಾಗಿ ಈಗಾಗಲೇ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವಾಟ್ಸ್‍ಅಪ್ ಸಂಖ್ಯೆಗಳನ್ನು ಪ್ರಕಟಿಸಲಾಗಿದೆ. ಆಧಾರ್ ಸೀಡಿಂಗ್ ಕಾರ್ಯವೂ ಪ್ರಗತಿಯಲ್ಲಿದೆ ಎಂದು ಹೇಳಿದರು.

ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ ಸಿದ್ಧತೆ ಮಾಡಲಾಗಿದೆ. ಪ್ರತಿ ಖಾಸಗಿ ಆಸ್ಪತ್ರೆಗಳಿಗೆ ನೊಡೆಲ್ ಆಧಿಕಾರಿಗಳನ್ನು ನೇಮಿಸಲಾಗಿದೆ. ಕೋವಿಡ್ ಜೊತೆಗೆ ನಾನ್‍ಕೋವಿಡ್ ರೋಗಿಗಳ ಚಿಕಿತ್ಸೆಗೂ ಯಾವುದೇ ತೊಂದರೆ ಆಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ. ಸತೀಶ ಮಾತನಾಡಿ, ಸರ್ಕಾರಿ ಯೋಜನೆಗಳನ್ನು ನಿಯಮಾನುಸಾರ ಜಾರಿ ಮಾಡಲಾಗುತ್ತಿದೆ. ಅನರ್ಹ ಫಲಾನುಭವಿಗಳನ್ನು ಯೋಜನೆಗಳಿಗೆ ಆಯ್ಕೆ ಮಾಡಿದರೆ ಸಂಬಂಧಿಸಿದವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ವಸತಿ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸುವುದಾಗಿ ಹೇಳಿದರು.

ಶಾಸಕರಾದ ಅಮೃತ ದೇಸಾಯಿ, ಅರವಿಂದ ಬೆಲ್ಲದ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಮಾತನಾಡಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಿ.ಎಸ್. ಮುಗನೂರಮಠ ಸ್ವಾಗತಿಸಿ, ಸಭೆ ನಿರ್ವಹಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ಐ.ಬಿ., ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ ಸೇರಿದಂತೆ ಜಲಮಂಡಳಿ ಸ್ಮಾರ್ಟ್‍ಸಿಟಿ, ನೀರಾವರಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ, ತೋಟಗಾರಿಕೆ, ಮಹಾನಗರ ಪಾಲಿಕೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next