ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾನೆ ಎಂದು ಮಾಜಿ ಪ್ರಧಾನಿ , ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಘೋಷಿಸಿದ್ದಾರೆ.
ಶನಿವಾರ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್‌ಡಿಡಿ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮುಂದುವರಿಯಲಿದೆ ಎಂದರು.
ಫೆಬ್ರವರಿ ಇಲ್ಲ ಮಾರ್ಚ್ ತಿಂಗಳಲ್ಲಿ ಚುನಾವಣೆ ಘೋಷಣೆಯಾಗಲಿದೆ.ಚುನಾವಣೆಗೆ ಜೆಡಿಎಸ್ ಈಗಾಗಲೇ ಸಿದ್ದವಾಗಿದೆ ಎಂದರು.
28 ಸ್ಥಾನಗಳ ಪೈಕಿ 12 ಸ್ಥಾನಗಳನ್ನು ನಾವು ಕೇಳಿದ್ದೇವೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ. ಯಾವ ಕ್ಷೇತ್ರಗಳನ್ನು ಬಿಟ್ಟು ಕೊಡಬೇಕು,ಯಾವ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎನ್ನುವುದನ್ನು ನಿರ್ಧರಿಸುತ್ತೇವೆ ಎಂದರು.
ಮೊಮ್ಮಗನಿಗೆ ಕ್ಷೇತ್ರ ಬಿಟ್ಟುಕೊಟ್ಟ ತಾತ
ಪ್ರಜ್ವಲ್ ಹಾಸನದಲ್ಲಿ ಪಕ್ಷ ಸಂಘಟಿಸುವ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ನಾನು ಹಾಸನ ಲೋಕಸಭಾ ಕ್ಷೇತ್ರವನ್ನು ಅವನಿಗೆ ಬಿಟ್ಟುಕೊಡುತ್ತೇನೆ ಎಂದರು.