ಬಳ್ಳಾರಿ: ವಿಧಾನ ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪರೆಡ್ಡಿಯವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿ ಪಕ್ಷದಿಂದ ಉಚ್ಚಾಟನೆ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದ ಎನ್.ಪ್ರತಾಪರೆಡ್ಡಿಯವರು, ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಬಯಸಿದ್ದರು. ಆದರೆ, ಟಿಕೇಟ್ ನೀಡಿಲ್ಲ. ಪರಿಣಾಮ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿದ್ದಾರೆ. ಇವರ ಈ ನಡೆ ಪಕ್ಷ ವಿರೋಧಿ ಚಟುವಟಿಕೆಯಾಗಿರುವ ಹಿನ್ನೆಲೆಯಲ್ಲಿ ಎನ್.ಪ್ರತಾಪರೆಡ್ಡಿಯವರನ್ನು ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಮುಂದಿನ 6 ವರ್ಷಗಳವರೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. ಇವರಿಗೆ ಯಾರೂ ಬೆಂಬಲ ಸೂಚಿಸಿ, ಪ್ರಚಾರದಲ್ಲಿ ತೊಡಗಿದರೂ ಅಂತಹವರ ವಿರುದ್ಧವೂ ಶಿಸ್ತು ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.