ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯನ್ನು ಕೇರಳದವರು ಮಾಡಿಲ್ಲ; ಆದರೆ, ಆರೋಪಿಗಳಿಗೆ ಕೇರಳದ ನಂಟು ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಮಧ್ಯೆ, ಕೊಲೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಶುಕ್ರವಾರ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಪ್ರಾಥಮಿಕ ತನಿಖಾ ವರದಿ(ಎಫ್ಐಆರ್) ಸಲ್ಲಿಸಿದ್ದಾರೆ.
ಅಲ್ಲದೆ, ಪ್ರವೀಣ್ ನೆಟ್ಟಾರು ಕೊಲೆಯನ್ನು ಕೇರಳಿಗರು ಮಾಡಿಲ್ಲ. ಬದಲಿಗೆ ಒಂದು ಸಮುದಾಯಕ್ಕೆ ಸೇರಿದ ಸ್ಥಳೀಯ ಯುವಕರೇ ಸಂಚು ರೂಪಿಸಿ ಹತ್ಯೆಗೈದಿದ್ದಾರೆ. ಅಲ್ಲದೆ, ಪ್ರವೀಣ್ ನೆಟ್ಟಾರು ಹತ್ಯೆಗೆ ಹಲಾಲ್ ಕಟ್ ಮತ್ತು ಜಟ್ಕಾ ಕಟ್ ವಿವಾದವೇ ಕಾರಣ ಎಂದು ತನಿಖಾ ಸಂಸ್ಥೆ ಮೂಲಗಳು ಹೇಳಿವೆ.
ಜತೆಗೆ ಅದೇ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ನಡೆದ ಮಸೂದ್ ಎಂಬಾತನ ಕೊಲೆಗೆ ಪ್ರತೀಕಾರವಾಗಿ ಪ್ರವೀಣ್ ನೆಟ್ಟಾರು ಹತ್ಯೆ ಮಾಡಲಾಗಿದೆ ಎಂಬುದು ತನಿಖಾ ಸಂಸ್ಥೆಗಳ ಮಾಹಿತಿಯಲ್ಲಿ ಬೆಳಕಿಗೆ ಬಂದಿದೆ.
ಈ ಆಧಾರದ ಮೇಲೆ ಎನ್‌ಐಎ ಅಧಿಕಾರಿಗಳು ಪ್ರಕರಣ ಸಂಬಂಧ ಭಾರತೀಯ ದಂಡ ಸಂಹಿತೆ 302(ಕೊಲೆ) ಮತ್ತು 120(ಬಿ)( ಕೊಲೆಗೆ ಸಂಚು) ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿ ಕೋರ್ಟ್‌ಗೆ ಸಲ್ಲಿಸಿದ್ದಾರೆ.