Advertisement

ಪ್ರವೀಣ್ ಕೊಲೆ; ಸರಕಾರ ಎಚ್ಚೆತ್ತು ಕೊಳ್ಳಲಿಲ್ಲವೇಕೆ?: ಹೆಚ್ ಡಿಕೆ ಕಿಡಿ

02:51 PM Jul 27, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಎಂದು ಪ್ರವೀಣ್ ನೆಟ್ಟಾರು ಕೊಲೆ ಕುರಿತು ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

Advertisement

ಸರಣಿ ಟ್ವೀಟ್ ಮಾಡಿ, ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರ್ಕಾರ ಮೈಮರೆತಿದ್ದು ಯಾಕೆ? ಎಂದು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಪ್ರತಿ ಕೊಲೆ ಅದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ ಬಿಜೆಪಿ ಸರ್ಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ, ಏಕೆ?. ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ! ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವ, ಈಗ ಕೊಲೆಯಾದ ಪ್ರವೀಣ್ ನೆಟ್ಟಾರು ಕೂಡ ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ! ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂಥ ಗಲಾಟೆಗಳಲ್ಲಿ ಕಾಣೋದೇ ಇಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕೆಲ ಸಂಘಟನೆಗಳು ಬಡ ಯುವಕರನ್ನು ದಾರಿ ತಪ್ಪಿಸಿ ಸ್ವಾರ್ಥ ಸಾಧನೆಗಾಗಿ ಸಾವಿನ ದವಡೆಗೆ ದೂಡುತ್ತಿವೆ. ಬಡ ಕುಟುಂಬಗಳ ಜೀವನಾಧಾರವಾಗಿರುವ ಯುವಕರನ್ನು ಬಲಿ ತೆಗೆದುಕೊಳ್ಳುತ್ತವೆ. ಈ ಬಗ್ಗೆ ಯುವಕರು, ಪೋಷಕರು ಎಚ್ಚೆತ್ತುಕೊಳ್ಳಬೇಕು ಎಂದು ಕಿವಿಮಾತು ಹೇಳಿದ್ದಾರೆ.

Advertisement

ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗೆಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ. ಈ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಲು ದೈರ್ಯ ಇಲ್ಲ. ಈ ಅಸಹಾಯಕತೆಗೆ ಕಾರಣ ಏನು?. ಅಂಕೆಯೇ ಇಲ್ಲದ ಹಂತಕರ ಆಟಕ್ಕೆ ಇತಿಶ್ರೀ ಹಾಡಿ, ಹೆಡೆಮುರಿ ಕಟ್ಟಬೇಕು. ಅದು ಬಿಟ್ಟು ಅಬ್ಬರದ ಹೇಳಿಕೆಗಳಿಂದ ಉಪಯೋಗವೇನು? ಪ್ರತಿ ಕೊಲೆಗೂ ಕೋಮು ಬಣ್ಣ ಹಚ್ಚುವ ನಾಯಕರ ರಾಜಕೀಯ ತಲೆಯಲ್ಲಿ ಭಯಂಕರ ದುರುದ್ದೇಶವೇ ಅಡಗಿದೆ ಎಂದು ಬರೆದಿದ್ದಾರೆ.

ಕರ್ನಾಟವು ಸರ್ವ ಜನಾಂಗದ ಶಾಂತಿಯ ತೋಟ. ಶಾಂತಿ, ಸೌಹಾರ್ದತೆ, ಸಹಿಷ್ಣುತೆಯ ಬೀಡು. ಭಾವನಾತ್ಮಕ ವಿಷಯಗಳಿಂದ ಬಂಡವಾಳ ಹೂಡಿಕೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹೊಡೆತ ಬಿದ್ದಿದೆ. ಹೊಸ ಕೈಗಾರಿಕೆಗಳು ಬರುತ್ತಿಲ್ಲ. ಶಾಂತಿ, ಸುವ್ಯಸ್ಥೆ ಸಮಸ್ಯೆಯಿಂದ ಆರ್ಥಿಕ ಹಿಂಜರಿತ ಉಂಟಾಗಿ ಕೈಗಾರಿಕೆಗಳು ವಲಸೆ ಹೋದರೆ ಎದುರಾಗುವ ನಿರುದ್ಯೋಗ ಸಮಸ್ಯೆಗೆ ಯಾರು ಹೊಣೆ ಆಗುತ್ತಾರೆ? ನಿರುದ್ಯೋಗವೇ ಇಂಥ ಘಟನೆಗಳಿಗೆ ಕಾರಣ. ಹತಾಶ ಯುವಕರ ಮನಸ್ಸು ಕೆಡಿಸಲಾಗುತ್ತಿದೆ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಟ್ವೀಟ್ ಗಳಲ್ಲಿ ಅಭಿಪ್ರಾಯ ಹೊರ ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next