ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಖಾತರಿ ಯೋಜನೆಗೆ ರಾಜ್ಯ ಸರ್ಕಾರದಿಂದ ಮತ್ತೂಮ್ಮೆ 649.73 ಕೋಟಿ ರೂ.ಮುಂಗಡ ಹಣ ಬಿಡುಗಡೆ ಮಾಡಲಾಗಿದೆ.
ಈ ಕುರಿತು ಮುಖ್ಯಮಂತ್ರಿಯವರ ಕಚೇರಿಯಿಂದ ಹೇಳಿಕೆ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕಾಗಿರುವ ಅನುದಾನ ಬಿಡುಗಡೆಯಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಮತ್ತೂಮ್ಮೆ 649.73 ಕೋಟಿ ರೂ.ಬಿಡುಗಡೆ ಮಾಡಲಾಗಿದೆ.
ಇದರಿಂದಾಗಿ ರಾಜ್ಯದಿಂದ ಒಟ್ಟು 1234.37 ಕೋಟಿ ರೂ.ಗಳ ಮುಂಗಡ ಹಣ ಬಿಡುಗಡೆಯಾದಂತಾಗಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು, ಇಂತಹ ಸಂದರ್ಭದಲ್ಲಿ ಜನ ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಪ್ಪಿಸಲು ನೆರವಾಗುವ ಯೋಜನೆ ರಾಷ್ಟ್ರೀಯ ಉದ್ಯೋಗ ಖಾತರಿ.
ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಹಣವನ್ನು ಕೇಂದ್ರ ಸರ್ಕಾರವೇ ಭರಿಸಬೇಕಿದೆ. ಆದರೆ, ಕೇಂದ್ರ ಸರ್ಕಾರ ಸಕಾಲದಲ್ಲಿ ಅನುದಾನ ಬಿಡುಗಡೆ ಮಾಡದ ಕಾರಣ ರಾಜ್ಯ ಸರ್ಕಾರವು ಗ್ರಾಮೀಣ ಜನರ ಹಿತದೃಷ್ಟಿಯಿಂದ ಕೂಲಿ ವೆಚ್ಚಕ್ಕಾಗಿ ಹಾಗೂ ಸಾಮಗ್ರಿ ವೆಚ್ಚಕ್ಕಾಗಿ ಈವರೆಗೆ 1273.96 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿದೆ.
ಇದಕ್ಕೆ ಪ್ರತಿಯಾಗಿ, ಕೇಂದ್ರ ಸರ್ಕಾರವು 815.36 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 688.95 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮುಂಗಡ ಹಣ ಮರುಪಾವತಿಗೆ ಸರಿಹೊಂದಿಸಿಕೊಳ್ಳುವಂತೆ ಸೂಚಿಸಿದೆ. ಅಂದರೆ, ಕೇಂದ್ರ ಸರ್ಕಾರವು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೇವಲ 166.02 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿದಂತಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.