ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸಂಭವಿಸುವ ರಸ್ತೆ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ರಸ್ತೆ ಸುರಕ್ಷತೆ ಹೆಚ್ಚಿಸಲು ಅಧಿಕಾರಿಗಳು ಮತ್ತಷ್ಟು ಮುಂಜಾಗ್ರತೆ ಕ್ರಮಗಳನ್ನು ಜಿಲ್ಲೆಯಲ್ಲಿ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಆರ್.ಲತಾ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿಂದಿನ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಅನುಷ್ಠಾನದ ಬಗ್ಗೆ ಅಧಿ ಕಾರಿಗಳು ಮಾಹಿತಿ ಪಡೆದು ಬ್ಯಾರಿಕೇಡ್ ಅಳವಡಿಕೆ ಆ್ಯಂಬುಲೆನ್ಸ್ ಸೇವೆ ಹಾಗೂ ಮಂಚನಬಲೆ ಅಂಡರ್ ಪಾಸ್, ಕಣಿವೆ ರಸ್ತೆಗಳ ಅಗಲೀಕರಣ ಬಗ್ಗೆ ರಾಷ್ಟ್ರೀಯ ಹೆದ್ದಾರಿ 234 ಕಾಮಗಾರಿಗಳು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಬೇಕೆಂದರು.
ರಸ್ತೆ ಸುರಕ್ಷತೆಗೆ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿ ಕಾರಿಗಳು ಕಾಳಜಿ ವಹಿಸಬೇಕು. ಅಪಘಾತ ಪ್ರಕರಣ ಗಳ ಬಗ್ಗೆ ಅಂಕಿ ಅಂಶಗಳಷ್ಟೇ ಅಲ್ಲದೇ ಅದರ ಕುರಿತು ವೈಜ್ಞಾನಿಕ ವಿಶ್ಲೇಷಣೆ ಅಗತ್ಯ. ಇದರಿಂದ ಅಪಘಾತದ ನಿಖರ ಮಾಹಿತಿ ತಿಳಿಯುವುದರಿಂದ, ಸಮಸ್ಯೆಗಳನ್ನು ಕೂಡಲೇ ನಿವಾರಿಸಿ ಮುಂದಾಗಬಹುದಾದ ಅವಘಡ ಗಳನ್ನು ತಡೆಗಟ್ಟಬಹುದು.
ರಸ್ತೆ ಸುರಕ್ಷತೆ ಹೆಚ್ಚಿಸುವಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕೆಂದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿ ಕಾರಿ ಮಂಜುನಾಥ್, ಚಿಂತಾಮಣಿ ಉಪ ವಿಭಾಗದ ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗಿರೆಡ್ಡಿ, ನಗಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಭಾಸ್ಕರ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.