ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು. ರಾಜ್ಯೋತ್ಸವದಲ್ಲಿ ಪೊಲೀಸ್ ಪರೇಡ್‌ಗೆ ಮಾತ್ರ ಅವಕಾಶವಿದ್ದು, ಯಾವುದೇ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಸಿ.ಪಿ.ಎಡ್ ಮೈದಾನದಲ್ಲಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಚನ್ನಮ್ಮನ ಪುತ್ಥಳಿಗೆ ಜಿಲ್ಲಾಡಳಿತ ವತಿಯಿಂದ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಗುವುದು. ಕೋವಿಡ್ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳಂತೆ ಈ ಸಂದರ್ಭದಲ್ಲಿ ಮೆರವಣಿಗೆ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ. ಇದಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಹೇಳಿದರು.
ವೆಬಿನಾರ್‌ಗೆ ಸಲಹೆ: ಬೆಳಗಾವಿಯಲ್ಲಿಆಚರಿಸಲಾಗುವ ರಾಜ್ಯೋತ್ಸವವು ಇಡೀ ರಾಜ್ಯದಲ್ಲಿ ಪ್ರಸಿದ್ಧಿ ಪಡೆದಿದೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಿದರೂಅರ್ಥಪೂರ್ಣವಾಗಿರಬೇಕು. ಕನ್ನಡ ನಾಡು-ನುಡಿ ರಕ್ಷಣೆಗೆ ಶ್ರಮಿಸಿದ ಮಹನೀಯರ ಕುರಿತು ಆನ್ ಲೈನ್ ಮೂಲಕ ವಿಚಾರ ಸಂಕಿರಣ(ವೆಬಿನಾರ್) ಅಥವಾ ಸಂವಾದ ಕಾರ್ಯಕ್ರಮಗಳನ್ನುಜಿಲ್ಲಾಡಳಿತದಿಂದ ಹಮ್ಮಿಕೊಳ್ಳಬೇಕು ಎಂದು ಕನ್ನಡಪರ ಹೋರಾಟಗಾರ ಮೆಹಬೂಬ ಮಕಾನದಾರ ಸಲಹೆ ನೀಡಿದರು.
ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಇರುವ ಸ್ಥಳಕ್ಕೆ ಶಿವಾಜಿ ಬದಲಿಗೆ ಸಂಗೊಳ್ಳಿ ರಾಯಣ್ಣ ವೃತ್ತ ಎಂದು ನಾಮಕರಣ ಮಾಡಬೇಕು. ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮನ ಹೆಸರಿಡಬೇಕು ಎಂದು ಕನ್ನಡ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.
ಅನುಮತಿ ಬೇಡ: ಕನ್ನಡ ರಾಜ್ಯೋತ್ಸವ ದಿನದಂದು ಕೆಲ ಸಂಘಟನೆಗಳು ಕರಾಳ ದಿನ ಆಚರಿಸಲು ಮುಂದಾಗಿದ್ದು, ಯಾವುದೇ ಕಾರಣಕ್ಕೂ ಅದಕ್ಕೆ ಅನುಮತಿ ನೀಡಬಾರದು ಎಂದುಎಲ್ಲ ಕನ್ನಡ ಸಂಘಟನೆಗಳ ಪರವಾಗಿ ಅಶೋಕ ಚಂದರಗಿ ಮನವಿ ಮಾಡಿದರು. ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಸಮಾಜದ ಸ್ವಾಸ್ಥ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಕೋವಿಡ್ ವಾರಿಯರ್ಸ್‌ಗೆ ಗೌರವಿಸಬೇಕು ಎಂದು ಅವರು ಸಲಹೆ ನೀಡಿದರು.
ಸಭೆಯಲ್ಲಿ ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಘೂಳಪ್ಪ ಹೊಸಮನಿ, ನಗರ ಪೋಲಿಸ್ ಆಯುಕ್ತ ಕೆ.ತ್ಯಾಗರಾಜನ್, ಉಪ ಪೊಲೀಸ್ ಆಯುಕ್ತ ವಿಕ್ರಮ್ ಆಮಟೆ, ಜಿಪಂ ಸಿಇಒ ದರ್ಶನ ಎಚ್ .ವಿ, ಅಪರ ಜಿಲ್ಲಾಧಿಕಾರಿ ಅಶೋಕ ದುಟಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹಾಗೂ ವಿವಿಧ ಕನ್ನಡ ಪರ ಹೋರಾಟಗಾರರು ಭಾಗವಹಿಸಿದ್ದರು. ಇದಕ್ಕೂ ಮುನ್ನ ಕೋವಿಡ್-19 ಸೋಂಕಿನಿಂದ ಇತ್ತೀಚೆಗೆ ಮೃತರಾದ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ ಅಂಗಡಿ ಹಾಗೂ ಕನ್ನಡ ಪರ ಹೋರಾಟಗಾರರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ, ಮೌನ ಆಚರಿಸಲಾಯಿತು.