Advertisement

ಜಗಜೀವನರಾಂ-ಅಂಬೇಡ್ಕರ್‌ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ

05:04 PM Mar 23, 2022 | Team Udayavani |

ಹಾವೇರಿ: ಸರ್ಕಾರದ ಕೋವಿಡ್‌ ಮಾರ್ಗಸೂಚಿ ಅನ್ವಯ ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ| ಬಾಬಾಸಾಹೇಬ ಅಂಬೇಡ್ಕರ್‌ ಅವರ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಉಭಯ ನಾಯಕರ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಡಾ| ಬಾಬು ಜಗಜೀವನರಾಂ ಅವರ ಜಯಂತಿ ಏ. 5ರಂದು ಹಾಗೂ ಏ. 14ರಂದು ಡಾ| ಬಿ.ಆರ್‌. ಅಂಬೇಡ್ಕರ್‌ ಜನ್ಮ ದಿನಾಚರಣೆ ಕಾರ್ಯಕ್ರಮವಿದೆ. ಉಭಯ ನಾಯಕರ ಜಯಂತಿಯನ್ನು ಅತ್ಯಂತ ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಕುರಿತಂತೆ ಸಮಾಜದ ಮುಖಂಡರ ಸಲಹೆಗಳನ್ನು ಸ್ವೀಕರಿಸಿ ಉಭಯ ನಾಯಕರ ಜಯಂತಿಗಳನ್ನು ವ್ಯವಸ್ಥಿತವಾಗಿ ಸಂಘಟಿಸುವ ಕುರಿತಂತೆ ಅಧಿಕಾರಿಗಳಿಗೆ ವಿವಿಧ ಜವಾಬ್ದಾರಿಗಳನ್ನು ವಹಿಸಲಾಗುವುದು ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಸಮಾಜದ ವಿವಿಧ ಮುಖಂಡರು, ಪ್ರತಿ ವರ್ಷದಂತೆ ಏ. 5ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 10ಕ್ಕೆ ಡಾ| ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮೂಲಕ ಸರಳವಾಗಿ ಜಯಂತಿ ಆಚರಿಸುವುದು, ಏ. 14ರಂದು ನಡೆಯುವ ಡಾ| ಬಿ.ಆರ್‌. ಅಂಬೇಡ್ಕರ್‌ ಜಯಂತಿಯೊಂದಿಗೆ ಬಾಬು ಜಗಜೀವನರಾಂ ಜಯಂತಿಯನ್ನು ಡಾ| ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ಒಟ್ಟಾಗಿ ಆಚರಿಸುವ ಕುರಿತಂತೆ ಸಲಹೆ ನೀಡಿದರು.

ಏ. 14ರಂದು ಬೆಳಗ್ಗೆ 11.30ಕ್ಕೆ ಡಾ| ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ಹಾಗೂ ಬಾಬು ಜಗಜೀವನರಾಂ ಅವರ ಜಯಂತಿಯ ಉದ್ಘಾಟನಾ ಸಮಾರಂಭ, ಉಭಯ ನಾಯಕರ ಜೀವನ ಮತ್ತು ಸಾಧನೆ ಕುರಿತಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮ, ಎಸ್‌ಎಸ್‌ಎಲ್‌ಸಿ, ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಪಡೆದ ಹಾಗೂ ಪಿಎಚ್‌ಡಿ ಪದವೀಧರರಿಗೆ ಸನ್ಮಾನ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.

Advertisement

ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಗಣ್ಯರು ಹಾಗೂ ಸಮಾಜದ ಎಲ್ಲ ಸಮುದಾಯದವರನ್ನು ಆಹ್ವಾನಿಸಿ ಅರ್ಥಪೂರ್ಣವಾಗಿ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಕೈಗೊಳ್ಳಲು ನಿರ್ಧರಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ ಹೆಬ್ಬಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್‌, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ಜಿಪಂ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಮೆಗಳಮನಿ, ಉಡಚಪ್ಪ ಮಾಳಗಿ, ಹೊನ್ನಪ್ಪ ತಗಡಿನಮನಿ, ಬಸವರಾಜ ಹೆಡಿಗೊಂಡ, ಅಕ್ಷತಾ ಕೆ.ಸಿ., ಸಂಜಯಗಾಂಧಿ ಸಂಜಯಣ್ಣನವರ, ಜಗದೀಶ ಬೆಟಗೇರಿ, ಜಗದೀಶ ಕರಬಸಣ್ಣನವರ, ನಾಗರಾಜ ಮಾಳಗಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಸಮಾಜದ ಮುಖಂಡರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

 

ಮಾಜಿ ಉಪಪ್ರಧಾನಮಂತ್ರಿ ಡಾ| ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಜಯಂತಿಯನ್ನು ಅತ್ಯಂತ ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿಆಚರಿಸಲಾಗುವುದು. ಸಮಾಜದ ಮುಖಂಡರ ಸಲಹೆಗಳನ್ನು ಸ್ವೀಕರಿಸಿ ಉಭಯ ನಾಯಕರ ಜಯಂತಿಗಳನ್ನು ವ್ಯವಸ್ಥಿತವಾಗಿ ಸಂಘಟಿಸಲಾಗುವುದು.

 ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ

 

ಸ್ತಬ್ಧಚಿತ್ರ ಮೆರವಣಿಗೆ: ಏ. 14ರಂದು ಬೆಳಗ್ಗೆ 9ಕ್ಕೆ ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿರುವ ಬಾಬಾಸಾಹೇಬ ಅಂಬೇಡ್ಕರ್‌ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಅಂಬೇಡ್ಕರ್‌ ವೃತ್ತದಿಂದ ಜಿ.ಎಚ್‌. ಕಾಲೇಜು ಹಿಂಭಾಗದ ನೇತಾಜಿ ನಗರದಲ್ಲಿರುವ ಡಾ| ಬಿ.ಆರ್‌. ಅಂಬೇಡ್ಕರ್‌ ಭವನದವರೆಗೆ ಮೆರವಣಿಗೆ ಸಾಗುವುದು. ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರ ಹಾಗೂ ವಿವಿಧ ಕಲಾತಂಡಗಳ ಮೂಲಕ ಮೆರವಣಿಗೆ ನಡೆಸಲು ನಿರ್ಧರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next