Advertisement

ಸಚಿವರ ಸಂವಾದ-ಸಿದ್ಧತೆ ಪರಿಶೀಲನೆ

11:42 AM Jun 24, 2022 | Team Udayavani |

ಬೆಳಗಾವಿ: ಕೇಂದ್ರ ಸರಕಾರವು ಕಳೆದ ಎಂಟು ವರ್ಷಗಳಲ್ಲಿ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆಗಳ ಫಲಾನುಭವಿಗಳ ಜೊತೆಗೆ ಕೇಂದ್ರ ಸಚಿವರಾದ ಸೋಮಪ್ರಕಾಶ್‌ ಅವರು ಇದೇ ಜೂ.27 ರಂದು ಸಂವಾದ ನಡೆಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಹೇಳಿದರು.
ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಗಳ ಫಲಾನುಭವಿಗಳ ಜೊತೆ ಕೇಂದ್ರ ಸಚಿವರ ಸಂವಾದ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ಆವಾಸ್‌ ಯೋಜನೆ, ಉಜ್ವಲ್‌ ಯೋಜನೆ, ಜಲಜೀವನ ಮಿಷನ್‌, ಆಯುಷ್ಮಾನ್‌ ಭಾರತ, ಪ್ರಧಾನಮಂತ್ರಿ ಮುದ್ರಾ ಯೋಜನೆ, ಪೋಷಣ ಅಭಿಯಾನ, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ಸೇರಿದಂತೆ ವಿವಿಧ ಯೋಜನೆಯ ಫಲಾನುಭವಿಗಳ ಜೊತೆ ಸಂವಾದ ನಡೆಸಲಿದ್ದಾರೆ ಎಂದರು.
ಸಂವಾದ ಕಾರ್ಯಕ್ರಮದ ನಂತರ ಕೇಂದ್ರ ಸಚಿವರು ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲಿದ್ದು ಬೆಳಗಾವಿ ಕೋಟೆ, ಪಡಿತರ ವಿತರಣಾ ಅಂಗಡಿ, ಬಿಮ್ಸ್‌ ಜನೌಷಧಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಇದಲ್ಲದೇ ಅಗಸಗ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಮೃತ ಸರೋವರ ಕಾಮಗಾರಿ ಹಾಗೂ ಅಗಸಗಿ ಮತ್ತು ಕಡೋಲಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಶಾಲಾಭಿವೃದ್ಧಿ ಕಾಮಗಾರಿ ವೀಕ್ಷಿಸಲಿದ್ದಾರೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಲ್ಲಿ ಕೇಂದ್ರ ಸರಕಾರದ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡ ಸಚಿವರು, ಯೋಜನೆಗಳ ಕುರಿತ ಪಕ್ಷಿನೋಟವನ್ನು ಒಳಗೊಂಡ ಮಾಹಿತಿ ಪುಸ್ತಿಕೆಯನ್ನು ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕೇಂದ್ರ ಸರಕಾರದ ಎಂಟು ಮಹತ್ವಾಕಾಂಕ್ಷಿ ಯೋಜನೆಗಳು ಮಾತ್ರವಲ್ಲದೇ, ಕೆರೆಗಳ ಅಭಿವೃದ್ಧಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗೆ ಜಾರಿಗೊಳಿಸಲಾದ ಯೋಜನೆಗಳ ಬಗ್ಗೆ ಸಹ ಮಾಹಿತಿ ಒದಗಿಸಬೇಕು ಎಂದು ಸಲಹೆ ನೀಡಿದರು.
ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಪರಿಶಿಷ್ಟ ಜಾತಿ, ಪಂಗಡದವರು, ಓಬಿಸಿ, ಮಹಿಳೆಯರು ಸೇರಿದಂತೆ ಎಲ್ಲರಿಗೂ ಅವಕಾಶ ಕಲ್ಪಿಸಬೇಕು. ಇದಲ್ಲದೇ ಕೋವಿಡ್‌ ನಿಂದ ತಂದೆ-ತಾಯಿಯನ್ನು ಕಳೆದುಕೊಂಡಿರುವ ಜಿಲ್ಲೆಯ 22 ಮಕ್ಕಳಿಗೆ ಪಿಎಂ-ಕೇರ್ಸ್‌ ನಿಧಿಯಿಂದ ತಲಾ ಹತ್ತು ಲಕ್ಷ ರೂ. ನೀಡಲಾಗಿದ್ದು, ಅಂತಹ ಫಲಾನುಭವಿ ಮಕ್ಕಳನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಬಂದು ಅವರಿಗೆ ಸೌಲಭ್ಯಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಹೇಳಿದರು. ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಕೇಂದ್ರ ಸಚಿವ ಸೋಮ ಪ್ರಕಾಶ್‌ ಅವರು ಜೂ.27 ರಂದು ಬೆಳಿಗ್ಗೆ 10.30 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಫಲಾನುಭವಿಗಳ ಜತೆ ಸಂವಾದ ನಡೆಸಲಿದ್ದಾರೆ. ಪ್ರತಿ ತಾಲೂಕಿನಿಂದ ಐದು ಜನ ಫಲಾನುಭವಿಗಳನ್ನು ಕರೆಸಲಾಗುವುದು. ಅದರಲ್ಲಿ ಪ್ರತಿ ಯೋಜನೆಯ ಇಬ್ಬರು ಫಲಾನುಭವಿಗಳನ್ನು ಸಂವಾದಕ್ಕೆ ಆಯ್ಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದರ್ಶನ್‌, ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್‌ ಘಾಳಿ, ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ| ಪ್ರವೀಣ ಬಾಗೇವಾಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಕೃಷಿ ಇಲಾಖೆಯ ಉಪ ನಿರ್ದೇಶಕ ಡಾ| ಎಚ್‌.ಡಿ.ಕೋಳೇಕರ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next