Advertisement

ಪ್ರಧಾನಿ ಮೋದಿ ಭೇಟಿಗೆ ಭರದ ಸಿದ್ಧತೆ; 27ರಂದು ಬೆಳಗಾವಿಗೆ ಪ್ರಧಾನಿ

06:18 PM Feb 23, 2023 | Team Udayavani |

ಬೆಳಗಾವಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆ.27 ರಂದು ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಶಿಷ್ಟಾಚಾರ ಪಾಲನೆ ಸೇರಿದಂತೆ ಪ್ರತಿಯೊಂದು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಪ್ರಧಾನಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೂರ್ವಸಿದ್ಧತೆ ಕುರಿತು ಬುಧವಾರ ಜಿಲ್ಲೆಯ ಉನ್ನತ ಅಧಿಕಾರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿ ಪೂರ್ವಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಪ್ರಧಾನಮಂತ್ರಿಗಳ ಕಾರ್ಯಾಲಯದ ನಿರ್ದೇಶನದಂತೆ ಭದ್ರತಾ ವ್ಯವಸ್ಥೆ, ಶಿಷ್ಟಾಚಾರ ಹಾಗೂ ವೇದಿಕೆ ನಿರ್ಮಾಣ ಸೇರಿದಂತೆ ಪ್ರತಿಯೊಂದು ಕೆಲಸವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದರು.

ಅಂತಿಮ ಕಾರ್ಯಕ್ರಮ ಪಟ್ಟಿಯ ಪ್ರಕಾರ ಕೊನೆಗಳಿಗೆಯಲ್ಲಿ ಕೆಲವು ಮಾರ್ಪಾಡು ಆಗಬಹುದು. ಇದನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ಜಿಲ್ಲಾಧಿಕಾರಿಗಳು ಮತ್ತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಧಾನಮಂತ್ರಿಗಳ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿಯ ಪ್ರಕಾರ ಸಂಬಂಧಪಟ್ಟ ಇಲಾಖೆಗಳ ಜೊತೆ ಚರ್ಚಿಸಿ ಈಗಾಗಲೇ ಕಾರ್ಯಕ್ರಮದ ಸಿದ್ಧತೆಗಳನ್ನು ಆರಂಭಿಸಲಾಗಿದ್ದು, ಪ್ರಧಾಮಂತ್ರಿಗಳ ಕಾರ್ಯಾಲಯ ಹಾಗೂ ಎಸ್‌.ಪಿ.ಜಿ. ಅಧಿಕಾರಿಗಳ ತಂಡದ ನಿರ್ದೇಶನದ ಅನ್ವಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ತಿಳಿಸಿದರು.

ವಿಡಿಯೋ ಸಂವಾದ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತರಾದ ಎಂ.ಜಿ.ಹಿರೇಮಠ, ಬೆಳಗಾವಿ ನಗರ ಪೊಲೀಸ್‌ ಆಯುಕ್ತ ಡಾ| ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್‌ ಭೋಯಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಂಜೀವ್‌ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.

Advertisement

ನಂತರ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅವರು, ಪ್ರಧಾನಿಗಳ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲಿರುವುದರಿಂದ ಪಾರ್ಕಿಂಗ್‌ ಮತ್ತು ಊಟದ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಬೇಕು ಎಂದು ಸೂಚಿಸಿದರು. ಇದಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಪ್ರತಿಯೊಬ್ಬ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಬೇಕು.

ತುರ್ತು ವೈದ್ಯಕೀಯ ಸೌಲಭ್ಯ, ಶುದ್ಧ ಕುಡಿಯುವ ನೀರು, ಮೊಬೈಲ್‌ ಶೌಚಾಲಯ ಮತ್ತಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಉಪ ವಿಭಾಗಾಧಿಕಾರಿ ಬಲರಾಮ್‌ ಚವ್ಹಾಣ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಮಹೇಶ್‌ ಕೋಣಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗದುಂ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next