ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯು 6 ರಿಂದ 8ನೇ ತರಗತಿಯವರೆಗಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ವೃಂದದ ಹುದ್ದೆಗಳ ನೇರ ನೇಮಕಾತಿಗಾಗಿ ಮೇ 21 ಮತ್ತು 22ರಂದು ನಗರದ 13 ಪರೀಕ್ಷಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದ್ದು ಅಗತ್ಯವಿರುವ ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಆರ್. ಸೆಲ್ವಮಣಿ ಹೇಳಿದರು.
ಸೋಮವಾರ ಡಿಸಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪರೀಕ್ಷಾ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷೆಗಳಲ್ಲಿ ಯಾವುದೇ ಅಕ್ರಮ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಸಿ.ಸಿ.ಟಿ.ವಿ. ಕಣ್ಗಾವಲು ಹಾಕಲಾಗಿದೆ ಎಂದರು.
ಪರೀಕ್ಷೆ ಸುಗಮವಾಗಿ ಸಕಾಲದಲ್ಲಿ ನಡೆಯಲು ಉಸ್ತುವಾರಿಗಾಗಿ ತ್ರಿಸದಸ್ಯ ಸಮಿತಿ ರಚಿಸಲಾಗಿದೆ. ಅಲ್ಲದೇ ಮಾರ್ಗಾಧಿಕಾರಿಗಳು, ಮೇಲ್ವಿಚಾರಕರು, ಅಗತ್ಯ ಸಿಬ್ಬಂದಿ ನಿಯೋಜಿಸಲಾಗಿದೆ ಎಂದರು. ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳು ಹಾಗೂ ಕೇಂದ್ರಗಳ ಮೇಲ್ವಿಚಾರಕರು ಪರೀಕ್ಷಾ ಕೇಂದ್ರಕ್ಕೆ ಎಲೆಕ್ಟ್ರಾನಿಕ್ಸ್ ಉಪಕರಣಗಳು, ಸ್ಮಾರ್ಟ್‌ವಾಚ್, ಮೊಬೈಲ್ ಮುಂತಾದವುಗಳನ್ನು ತೆಗೆದುಕೊಂಡು ಹೋಗದಂತೆ ಸೂಚಿಸಿದರು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತರಾದ ಅಧಿಕಾರಿಗಳು ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕಾರ್ಯಕ್ಕೆ ಹಾಜರಾಗುವವರು ತಮ್ಮ ಸಂಬಂಧಿಗಳು, ಆಪ್ತೆಷ್ಟರು ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರದ ಪ್ರವೇಶದ್ವಾರದಲ್ಲಿ ಪೊಲೀಸ್ ಇಲಾಖೆಯಿಂದ ಲೋಹಶೋಧಕ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ. ಪ್ರತಿ ಕೊಠಡಿಯು ಶುದ್ಧ ಗಾಳಿ, ಬೆಳಕು ಹೊಂದಿರುವಂತೆ ಹಾಗೂ ಕೊಠಡಿಯಲ್ಲಿ ಗೋಡೆ ಗಡಿಯಾರ ಹಾಗೂ ಸಿ.ಸಿ. ಕ್ಯಾಮೆರಾ ಇರುವಂತೆ ಗಮನಹರಿಸಬೇಕು. ಎಲ್ಲಾ ಪರೀಕ್ಷಾ ಕಾರ್ಯಗಳ ವಿಡಿಯೋ ಚಿತ್ರೀಕರಣಕ್ಕೆ ಸೂಚಿಸಲಾಗಿದೆ ಎಂದರು.
ಮೇ 21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ರವರೆಗೆ ನಡೆಯುವ ಮೊದಲ ಅವಧಿಯಲ್ಲಿ 2826ವಿದ್ಯಾರ್ಥಿಗಳು, ಮಧ್ಯಾಹ್ನ 2.30ರಿಂದ 5.30ರವರೆಗೆ ನಡೆಯಲಿರುವ ಎರಡನೇ ಅವಧಿಯಲ್ಲಿ 431 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಮೇ 22ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿರುವ ಮೊದಲ ಅವಧಿಯಲ್ಲಿ 2604 ವಿದ್ಯಾರ್ಥಿಗಳು ಹಾಗೂ ಮಧ್ಯಾಹ್ನ 3ರಿಂದ ಸಂಜೆ 5 ರವರೆಗೆ ನಡೆಯಲಿರುವ ಎರಡನೇ ಅವಧಿಯಲ್ಲಿ 2604ವಿದ್ಯಾರ್ಥಿಗಳು ನಗರದ 13 ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.
ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷೆಗಳು ಪೂರ್ಣಗೊಳ್ಳುವವರೆಗೆ ಕೇಂದ್ರಗಳ ಸುತ್ತಮುತ್ತಲಿನ ಝೆರಾಕ್ಸ್, ಫ್ಯಾಕ್ಸ್, ಟೈಪಿಂಗ್ ಅಂಗಡಿಗಳನ್ನು ತೆರೆಯದಂತೆ ಆದೇಶ ಹೊರಡಿಸಲಾಗುವುದು. ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳು ಹಾಗೂ ನಿಯೋಜಿತ ಅಧಿಕಾರಿ-ಸಿಬ್ಬಂಗಳಲ್ಲದೇ ಇತರರು ಓಡಾಡದಂತೆ, 4ಕ್ಕೂ ಹೆಚ್ಚಿನ ಜನ ಗುಂಪು ಆದೇಶಿಸಲಾಗುವುದು ಎಂದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ಡಾ|ನಾಗೇಂದ್ರ ಎಫ್.ಹೊನ್ನಳ್ಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪರಮೇಶ್ವರಪ್ಪ ಜಿ.ಆರ್., ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ್ ಸುರಗೀಹಳ್ಳಿ, ಜಿಲ್ಲಾ ಖಜಾನಾಧಿಕಾರಿ ಎಚ್.ಎಸ್.ಸಾವಿತ್ರಿ ಸೇರಿದಂತೆ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂದಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.