Advertisement

ಸ್ಪರ್ಧಾತ್ಮಕ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಿ

04:16 PM Feb 24, 2021 | Team Udayavani |

ಗದಗ: ಫೆ.28 ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಾಗುತ್ತಿರುವ ಪ್ರಥಮ ದರ್ಜೆಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಯಶಸ್ವಿಗೊಳಿಸಬೇಕು. ಪರೀಕ್ಷಾ ಅಕ್ರಮಕ್ಕೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರೇ ಹೊಣೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು ಎಚ್ಚರಿಸಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಫೆ.28 ರಂದು ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಪ್ರವೇಶ ದ್ವಾರದಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಬೇಕು. ಅವರ ಕೈಗಳಿಗೆ ಸ್ಯಾನಿಟೈಸರ್‌ ಹಾಕಬೇಕು. ಪರೀಕ್ಷಾ ಕೇಂದ್ರದ ಒಳಬರುವ ಅಭ್ಯರ್ಥಿ ಹಾಗೂ ಸಿಬ್ಬಂದಿಗಳ ಮೊಬೈಲ್‌ ಸೇರಿದಂತೆ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಪರೀಕ್ಷಾ ಕೇಂದ್ರದಲ್ಲಿ ತರುವುದನ್ನು ನಿಷೇಧಿಸಿದೆ ಎಂದರು.

ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಹಾಗೂ ಅವ್ಯವಸ್ಥೆಗೆ ಆಸ್ಪದ ನೀಡದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ನಿಗಾ ವಹಿಸಬೇಕು. ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸುವ ಸಂಪೂರ್ಣ ಹೊಣೆಗಾರಿಕೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರದ್ದಾಗಿರುತ್ತದೆ ಎಂದು ಸೂಚಿಸಿದರು.

ಪರೀಕ್ಷೆ ಮುನ್ನ ದಿನವೇ ಪರೀಕ್ಷಾ ಕೇಂದ್ರಗಳ ಕೊಠಡಿಗಳನ್ನು ನಗರಸಭೆಯಿಂದ ಸ್ಯಾನಿಟೈಸ್‌ ಮಾಡಿಸಬೇಕು. ಪರೀಕ್ಷೆಗೆ ಆಗಮಿಸುವ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಯಲ್ಲಿ ಸರಿಯಾದ ಬೆಳಕಿನ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೇ, ಪರೀಕ್ಷಾ ಕೇಂದ್ರದ ದ್ವಾರದಲ್ಲಿ ಪರೀಕ್ಷಾ ಕೊಠಡಿಗಳ ಮಾಹಿತಿ ಪ್ರಕಟಿಸಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಗೊಂದಲವಾಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಪರೀಕ್ಷೆಗೆ ಆಗಮಿಸುವ ಅಭ್ಯರ್ಥಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಕೋವಿಡ್‌ ಶಂಕಿತ ಹಾಗೂ ಸೋಂಕಿತರಿಗೆ ಪರೀಕ್ಷೆ ಬರೆಯಲು ಆಗಮಿಸಿದಲ್ಲಿ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷಾ ಬರೆಯಲುಅವಕಾಶ ನೀಡಬೇಕು. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಸುಗಮ ಪರೀಕ್ಷೆ ಜರುಗಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಸೂಚಿಸಿದರು.

Advertisement

ಪರೀಕ್ಷಾ ರ್ಥಿಗಳು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿರುವ ಅಧಿಕಾರಿ ಸಿಬ್ಬಂದಿಗಳನ್ನು ಹೊರತುಪಡಿಸಿ ಇತರೆ ಯಾವುದೇ ವ್ಯಕ್ತಿ ಅಥವಾ ಐದು, ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು ಮತ್ತು ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿ  ಸಲಾಗಿದೆ. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ ಅಂಗಡಿ, ಬುಕ್‌ ಸ್ಟಾಲ್‌ ಬಂದ್‌ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸಲಿಂಗಪ್ಪ ಮಾತನಾಡಿ, ಫೆ.28 ರಂದು ಜಿಲ್ಲೆಯ 26ಪರೀಕ್ಷಾ ಕೇಂದ್ರಗಳಲ್ಲಿ 7641 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಫೆ.28 ರ ಬೆಳಿಗ್ಗೆ 10 ರಿಂದ 11.30ರವರೆಗೆ ಹಾಗೂ ಮ.2 ರಿಂದ 3.30ರವರೆಗೆ ಎರಡು ಅವಧಿಯಲ್ಲಿ ಪರೀಕ್ಷೆಗಳು ಜರುಗಲಿವೆ. ನಿಗದಿಪಡಿಸಿದ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ತಡವಾಗಿ ಆಗಮಿಸುವ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಪಂ ಸಿಇಒ ಭರತ್‌ ಎಸ್‌., ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಯತೀಶ್‌ ಎನ್‌., ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ, ಅಪರ ಜಿಲ್ಲಾಧಿಕಾರಿ ಸತೀಶ್‌ಕುಮಾರ್‌ ಎಂ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಭೂ ದಾಖಲೆಗಳ ಉಪನಿರ್ದೇಶಕ ರವಿಕುಮಾರ್‌, ಸಾರ್ವಜನಿಕ ಶಿಕ್ಷಣ ಇಲಾಖೆಯ ಬಾರಾಟಕ್ಕೆ ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next