Advertisement

ವಾಹನಗಳ ಮಾರ್ಗ ನಕ್ಷೆ ಸಿದ್ಧಪಡಿಸಿ

10:03 AM Jun 11, 2020 | Suhan S |

ಧಾರವಾಡ: ಜಿಲ್ಲೆಯ ಪ್ರತಿಯೊಬ್ಬ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ವಾಸಸ್ಥಳ ಪಡೆದು ಸಾರಿಗೆ ವಾಹನಗಳ ಮಾರ್ಗ ನಕ್ಷೆ ಸಿದ್ಧಪಡಿಸಿ ಸೌಕರ್ಯ ಒದಗಿಸಬೇಕೆಂದು ಡಿಸಿ ದೀಪಾ ಚೋಳನ್‌ ಸೂಚಿಸಿದರು.

Advertisement

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ 2020ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಕುರಿತಂತೆ ಬುಧವಾರ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಯಾವುದೇ ಗೊಂದಲಕ್ಕೆ ಅವಕಾಶವಾಗಬಾರದು. ಶಿಕ್ಷಣ ಇಲಾಖೆ ಸೂಚಿಸುವ ಮಾರ್ಗನಕ್ಷೆಗೆ ಅನುಗುಣವಾಗಿ ಸಾರಿಗೆ ಸಂಸ್ಥೆ ಹಾಗೂ ಖಾಸಗಿ ಶಾಲಾ ವಾಹನ ಬಳಸಿ ವಿದ್ಯಾರ್ಥಿಗಳಿಗೆ ಸಾರಿಗೆ ಸೌಕರ್ಯ ಕಲ್ಪಿಸಬೇಕು. ಕೋವಿಡ್‌ ಸಂದರ್ಭದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳ ಮತ್ತು ಸಿಬ್ಬಂದಿ ವಲಸೆ ಕಾರ್ಮಿಕರನ್ನು ಸ್ವಂತ ಸ್ಥಳಗಳಿಗೆ ತಲುಪಿಸಲು ಶ್ರಮವಹಿಸಿದ ಮಾದರಿಯಲ್ಲಿ ಈಗ ವಿದ್ಯಾರ್ಥಿಗಳ ಮಹತ್ವದ ಘಟ್ಟದಲ್ಲಿ ಸೇವೆ ಸಲ್ಲಿಸಬೇಕು ಎಂದರು.

ಕೋವಿಡ್ ವ್ಯಾಪಿಸಿರುವ ಈ ಸಂದರ್ಭದಲ್ಲಿ ಪರೀಕ್ಷೆ ನಡೆಸುವ ಕಾರ್ಯವನ್ನು ಪ್ರತಿಯೊಬ್ಬರು ಸವಾಲಾಗಿ ಸ್ವೀಕರಿಸಿ ಯಾವುದೇ ತೊಂದರೆಗಳಿಗೆ ಪರೀಕ್ಷಾ ನಕಲಿ ಮತ್ತಿತರ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸದಂತೆ ಎಚ್ಚರ ವಹಿಸಿ ಕರ್ತವ್ಯ ನಿರ್ವಹಿಸಬೇಕು. ಮಳೆಗಾಲ ಆರಂಭವಾಗುತ್ತಿರುವುದರಿಂದ ಪರೀûಾ ಕೊಠಡಿಗಳಲ್ಲಿ ಮಳೆ ನೀರು ಸೋರುವ ಸಾಧ್ಯತೆಗಳಿದ್ದರೆ ಮುಂಚಿತವಾಗಿ ಗುರುತಿಸಿ ಪರ್ಯಾಯ ಕಟ್ಟಡಗಳನ್ನು ಗುರುತಿಸಬೇಕೆಂದು ಸೂಚಿಸಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಸುಗಮವಾಗಿ ನಡೆಯಬೇಕು. ಯಾವುದೇ ಒಬ್ಬ ವಿದ್ಯಾರ್ಥಿ ಕೂಡಾ ಪರೀಕ್ಷೆಯಿಂದ ವಂಚಿತರಾಗಬಾರದು. ಪರೀಕ್ಷಾ ಕೇಂದ್ರಗಳಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಾಮಾಜಿಕ ಅಂತರದೊಂದಿಗೆ ಆಸನಗಳ ವ್ಯವಸ್ಥೆ, ಮಾಸ್ಕ್, ಸ್ಯಾನಿಟೈಸರ್‌ ಬಳಕೆ ಕಡ್ಡಾಯವಾಗಿದೆ. ಸರ್ಕಾರದ ಮಾರ್ಗಸೂಚಿಯನ್ವಯ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕೆಂದು ಸೂಚಿಸಿದರು.

ಜಿಪಂ ಸಿಇಒ ಡಾ| ಬಿ.ಸಿ. ಸತೀಶ್‌ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಆಯಾ ಶಾಲೆಯ ಮುಖ್ಯೋಪಾಧ್ಯಾಯರ ಮೂಲಕ ಸಂಪರ್ಕಿಸಿ ಸಾರಿಗೆ ಮಾಹಿತಿಯನ್ನು ಖಚಿತಪಡಿಸಿಕೊಳ್ಳಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್‌ ಮತ್ತು ಮಾಸ್ಕ್ ಪೂರೈಸಲಾಗುವುದು. ಸ್ಕೌಟ್ಸ್‌ ಮತ್ತು ಗೈಡ್ಸ್‌ ಸ್ವಯಂ ಸೇವಕರ ನೆರವಿನೊಂದಿಗೆ ಪರೀಕ್ಷೆ ನಡೆಸಬೇಕು ಎಂದರು.

Advertisement

ಡಿಡಿಪಿಐ ಮೋಹನ ಹಂಚಾಟೆ ಮಾತನಾಡಿ, ಜಿಲ್ಲೆಯಲ್ಲಿ 27841 ವಿದ್ಯಾರ್ಥಿಗಳು ಎಸ್‌ಎಸ್‌ ಎಲ್‌ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. 90 ಪರೀಕ್ಷಾ ಕೇಂದ್ರಗಳು, 17 ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಎಲ್ಲಾ 90 ಮುಖ್ಯ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಮುಖ್ಯ ಅಧಿಧೀಕ್ಷಕರು, ಮೊಬೈಲ್‌ ಸ್ವಾಧೀನಾಧಿ ಕಾರಿಗಳು, ಕಸ್ಟೋಡಿಯನ್‌ ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗೃತ ದಳ ಅಧಿಕಾರಿಗಳು, ಪ್ಯಾರಾ ಮೆಡಿಕಲ್‌ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಶಾರದಾ ಕಿರೇಸೂರ ಮಾತನಾಡಿ, ಜೂನ್‌ 18 ರಂದು ಜಿಲ್ಲೆಯ 38 ಪರೀಕ್ಷಾ ಕೇಂದ್ರಗಳಲ್ಲಿ ಪಿಯುಸಿ ದ್ವಿತೀಯ ವರ್ಷದ ಇಂಗ್ಲೀಷ್‌ ಪರೀಕ್ಷೆ ನಡೆಯಲಿದೆ. ಎಲ್ಲಾ 22000 ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಎನ್‌.ಆರ್‌. ಪುರುಷೋತ್ತಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಯಶವಂತ ಮದೀನಕರ, ವಾಕರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಹೆಚ್‌.ರಾಮನಗೌಡರ, ವಿವೇಕಾನಂದ ವಿಶ್ವಜ್ಞ, ಬಸವಲಿಂಗಪ್ಪ ಬೀಡಿ, ಬಿಇ ಒ ಗಳಾದ ಶ್ರೀಶೈಲ ಕರಿಕಟ್ಟಿ,ಉಮೇಶ ಬೊಮ್ಮಕ್ಕನವರ, ಎ.ಎ. ಖಾಜಿ, ಮಠಪತಿ, ಗಿರೀಶ್‌ ಪದಕಿ, ಅಶೋಕ ಸಿಂದಗಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next