ಚಿತ್ರದುರ್ಗ: ಜಿಲ್ಲೆಯಲ್ಲಿ ಉತ್ಪಾದಿಸುವ ಮತ್ತು ಬೆಳೆಯುವ ಉತ್ಪನ್ನಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡ್ಯೊಯಲು ವಿಪುಲ ಅವಕಾಶಗಳಿವೆ, ಈ ಬಗ್ಗೆ ವಿವಿಧ ಇಲಾಖೆ ಅಧಿಕಾರಿಗಳು ಡಿ. 31 ರೊಳಗೆ ಕ್ರಿಯಾ ಯೋಜನೆ ತಯಾರಿಸಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಫ್ತು ಉತ್ತೇಜನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯಾವುದನ್ನು ರಫ್ತು ಮಾಡಬಹುದು ಎನ್ನುವ ಬಗ್ಗೆಇಲಾಖೆವಾರು ಪಟ್ಟಿ ಮಾಡಿ ಪ್ರಸ್ತಾವನೆ ಸಲ್ಲಿಸಬೇಕು. ಮಧ್ಯವರ್ತಿಗಳಿಗೆ ಅವಕಾಶ ಮಾಡಿಕೊಡದೆ ನೇರವಾಗಿ ರಫ್ತು ಮಾಡಬೇಕು. ಅದರ ಅನುಕೂಲವನ್ನು ಉತ್ಪಾದಕರಿಗೆ ದೊರೆಯುವಂತೆ ಮಾಡಬೇಕು ಎಂದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಗುಣಮಟ್ಟದ ದಾಳಿಂಬೆ, ಶೇಂಗಾ, ಸಿರಿಧಾನ್ಯಗಳು ಸೇರಿದಂತೆ ಅನೇಕ ವಿಧದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು, ಸಿದ್ಧ ವಸ್ತುಗಳನ್ನು ರಫ್ತು ಮಾಡಲು ಅವಕಾಶವಿದೆ ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಮೊಳಕಾಲ್ಮೂರು ರೇಷ್ಮೆ ಸೀರೆ ಪ್ರಸಿದ್ಧಿ ಪಡದಿದ್ದು, ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮೂರು ಭಾಗದಲ್ಲಿ ಗುಣಮಟ್ಟದ ಹೈನುಗಾರಿಕೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಮಾಂಸ ಸಂಸ್ಕರಣೆ ಮಾಡಿ ವಿದೇಶಗಳಿಗೆ ರಫ್ತು ಮಾಡಬಹದಾಗಿದೆ. ಮಿಡಿ ಸೌತೆ ರಫ್ತು ಮಾಡಲಾಗುತ್ತಿದ್ದು ಇದಕ್ಕೆ ಇನ್ನೂ ಹೆಚ್ಚಿನ ಪ್ರೊತ್ಸಾಹ ನೀಡಬೇಕು ಎಂದು ಕೃಷಿ, ತೋಟಗಾರಿಕೆ,ಪಶುಸಂಗೋಪನೆ ಇಲಾಖೆಗಳ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಅಗ್ರಿ ಟೂರಿಸ್‌ಂಗೆ ಪ್ರೋತ್ಸಾಹ: ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತಿದೆ. ವಿಶೇಷವಾಗಿ ಬೆಳೆಯುವ ಬೆಳೆಗಳ ಪಟ್ಟಿ ಮಾಡಿಕೊಂಡು ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಅಗ್ರಿ ಟೂರಿಸ್ಟ್ ಪರಿಚಯ ಮಾಡಿಕೊಡಬೇಕು. ಕೃಷಿಯಲ್ಲಿ ಸಾಧನೆ ಮಾಡಿದ ಸಾಧಕರ ಪರಿಚಯವನ್ನು ಮಾಡಿಕೊಡಬಹುದು. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಅಧಿಕಾರಿಗಳು ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲೆಯಲ್ಲಿ ಈರುಳ್ಳಿ, ಶೇಂಗಾವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದ್ದು, ಇವುಗಳಿಗೆ ಅಗತ್ಯವಿರುವ ಮೂಲ ಸೌಲಭ್ಯ ಒದಗಿಸುವುದರ ಮೂಲಕ ಇವುಗಳ ರಫ್ತನ ಗುಣಮಟ್ಟ ಕಾಯ್ದುಕೊಳ್ಳುವಂತೆ ಮಾಡಬೇಕು ಎಂದು ಚರ್ಚಿಸಲಾಯಿತು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಪ್ರಸನ್ನ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಅಪರ ನಿರ್ದೇಶಕ ಪಾಟೀಲ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಸದಾಶಿವ, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ| ಕೃಷ್ಣಪ್ಪ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಆನಂದ್, ಲೀಡ್ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.