Advertisement

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ : ಡಿಸಿ ಶಿವಕುಮಾರ್‌

07:22 PM Sep 16, 2020 | Suhan S |

ಶಿವಮೊಗ್ಗ: ಸೆ. 21ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯನ್ನು ಯಾವುದೇ ಅಡಚಣೆಯಿಲ್ಲದಂತೆ ಸುಸೂತ್ರವಾಗಿ ನಡೆಸಲು ಎಲ್ಲಾ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಸೂಚನೆ ನೀಡಿದರು.

Advertisement

ಮಂಗಳವಾರ ಪೂರಕ ಪರೀಕ್ಷೆ ಆಯೋಜನೆ ಸಿದ್ಧತೆಗಳ ಕುರಿತು ಜಿಲ್ಲಾಡಳಿತ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯ 5225 ವಿದ್ಯಾರ್ಥಿಗಳು ಒಟ್ಟು 17 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಎರಡು ಪರೀಕ್ಷಾ ಕೇಂದ್ರಗಳನ್ನು ಮೀಸಲಿರಿಸಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯಲು ಸಾಧ್ಯವಾಗದ ಅಭ್ಯರ್ಥಿಗಳನ್ನು ಹೊಸ ಅಭ್ಯರ್ಥಿಗಳಾಗಿ ಪರಿಗಣಿಸಲಾಗುವುದು ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಕ್ರಮ ಕೈಗೊಳ್ಳುವುದರೊಂದಿಗೆ ವಿದ್ಯಾರ್ಥಿಗಳ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ಕೈಗೊಳ್ಳಲಾಗಿದ್ದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಪೂರಕ ಪರೀಕ್ಷೆ ಸಂದರ್ಭದಲ್ಲಿಯೂ ಕೈಗೊಳ್ಳಬೇಕು. ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸದ್ಯ ಕೋವಿಡ್ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವುದರಿಂದ ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಿಸುವ ಮುನ್ನ ಸ್ಯಾನಿಟೈಸರ್‌, ದೇಹದ ಉಷ್ಣತೆ ಪರೀಕ್ಷೆ ಕೈಗೊಳ್ಳಬೇಕು. ವಿದ್ಯಾರ್ಥಿಗಳು ಸುರಕ್ಷಿತ ಅಂತರ ಕಾಯ್ದುಕೊಳ್ಳುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಗುಂಪುಗೂಡಲು ಅವಕಾಶ ನೀಡಬಾರದು ಎಂದು ಸೂಚಿಸಿದರು.

ಕೋವಿಡ್ ಪಾಸಿಟಿವ್‌ ಇರುವ ವಿದ್ಯಾರ್ಥಿಗಳಿಗೆ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಇದಕ್ಕಾಗಿ ಸೂಕ್ತ ಸೆಂಟರ್‌ ಗಳನ್ನು ಗುರುತಿಸಿ ಎಲ್ಲಾ ವ್ಯವಸ್ಥೆ ಕಲ್ಪಿಸಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮಾಸ್ಕ್ಗಳು ಲಭ್ಯವಿರಬೇಕು. ಪರೀಕ್ಷೆ ನಡೆಯುವ ಮೊದಲ ದಿನ ಎಲ್ಲಾ ಪರೀಕ್ಷಾ ಕೇಂದ್ರಗಳ ಸ್ಯಾನಿಟೈಸೇಶನ್‌ ಮಾಡಬೇಕು. ಶೇ.100ರಷ್ಟು ಸುರಕ್ಷಿತವಾಗಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಿ. ಯಾವುದೇ ಬೇಜವಾಬ್ದಾರಿಗೆ ಆಸ್ಪದ ನೀಡಬಾರದು ಎಂದು ಅವರು ಎಚ್ಚರಿಕೆ ನೀಡಿದರು. ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ, ಡಿಡಿಪಿಐ ರಮೇಶ್‌, ಸುಮಂಗಲಾ ಕುಚಿನಾಡ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next