ಚಿತ್ರದುರ್ಗ: ಕೋವಿಡ್-19 ಲಸಿಕೆಗೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿದ್ದು, ಲಸಿಕೆಯನ್ನು ವ್ಯವಸ್ಥಿತವಾಗಿ ಸರಬರಾಜು ಮಾಡುವುದರ ಜೊತೆಗೆ ಯಾವುದೇ ತೊಂದರೆಯಾಗದಂತೆ ವಿತರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ಹಮ್ಮಿಕೊಂಡಿದ್ದ ಕೋವಿಡ್-19 ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿಅವರು ಮಾತನಾಡಿದರು. ಕೋವಿಡ್-19ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ತರಬೇತಿ ನೀಡಬೇಕು. ಲಸಿಕೆಯನ್ನು ವೈಜ್ಞಾನಿಕ ಹಾಗೂ ಸುರಕ್ಷಿತವಾಗಿ ಸಂಗ್ರಹಿಸಿಡಲು ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.ಗ್ರಾಪಂ ಮಟ್ಟದಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸಿದರೂ ಆ ಕಾರ್ಯಕ್ರಮದಲ್ಲಿ
ಕೋವಿಡ್-19 ಸಾಂಕ್ರಾಮಿಕ ರೋಗದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಕುರಿತು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಕುಮಾರಸ್ವಾಮಿ ಮಾತನಾಡಿ, ಜಿಲ್ಲಾ ಆರೋಗ್ಯಾ ಕಾರಿಗಳ ಕಚೇರಿಯಲ್ಲಿ ಪ್ರಾದೇಶಿಕ ಕೋಲ್ಡ್ ಸ್ಟೋರೇಜ್ ಕೇಂದ್ರ ತೆರೆಯಲಾಗಿದ್ದು, ಈ ಕೇಂದ್ರದಿಂದ ಶಿವಮೊಗ್ಗ, ದಾವಣಗೆರೆ, ಬಳ್ಳಾರಿ ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಲಸಿಕೆ ಪೂರೈಕೆಯಾಗಲಿದೆ. 36 ಲಕ್ಷಕ್ಕೂ ಅ ಧಿಕ ಡೋಸ್ ಗಳನ್ನು ಸಂಗ್ರಹಿಸಿಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಸಿ. ಸಂಗಪ್ಪ, ಜಿಪಂ ಸಿಇಒ ಟಿ. ಯೋಗೇಶ, ಎಎಸ್‌ಪಿ ಎಂ.ಬಿ. ನಂದಗಾವಿ, ಉಪವಿಭಾಗಾಧಿಕಾರಿ ಪ್ರಸನ್ನ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ತುಳಸಿರಂಗನಾಥ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎಚ್.ಜೆ. ಬಸವರಾಜ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸತೀಶ್ ರೆಡ್ಡಿ, ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಇದ್ದರು.
ಕೋವಿಡ್-19 ಲಸಿಕೆ ಹಾಗೂ ವಿತರಣೆಗೆ ಸಂಬಂಧಿಸಿದಂತೆ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ. ಲಸಿಕೆಯನ್ನು ಸಂಗ್ರಹಿಸಿಡಲು ಜಿಲ್ಲೆಯಲ್ಲಿ ಪ್ರಾದೇಶಿಕ ದಾಸ್ತಾನು ಕೇಂದ್ರವನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ.
-ಡಾ| ಕುಮಾರಸ್ವಾಮಿ, ಆರ್ಸಿಎಚ್ ಅಧಿಕಾರಿ