ಬಾಗಲಕೋಟೆ: ಜಿಲ್ಲೆಯಲ್ಲಿ ಸೆ.7ರಿಂದ 19ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಜರುಗಿದ ಪಿಯುಸಿ ಪೂರಕ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಬಾಗಲಕೋಟೆ ಮತ್ತು ಜಮಖಂಡಿಯಲ್ಲಿ ತಲಾ 2 ಹಾಗೂ ಬಾದಾಮಿ, ಹುನಗುಂದ, ಬೀಳಗಿ, ಮುಧೋಳದಲ್ಲಿ ತಲಾ 1ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಒಟ್ಟು 6,727 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಅದರಲ್ಲಿ 4300 ಬಾಲಕರು ಮತ್ತು 2427 ಬಾಲಕಿಯರು ಇದ್ದಾರೆ ಎಂದು ತಿಳಿಸಿದರು. ಕೋವಿಡ್-19 ಹಿನ್ನಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರಗಳನ್ನು ಪರೀಕ್ಷೆ ನಡೆಯುವ 3 ದಿನಗಳ ಮುಂಚೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸುವಂತೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಆದೇಶಿಸಲು ಸೂಚಿಸಿದರು.
ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು 2 ಗಂಟೆ ಮುಂಚಿತವಾಗಿ ಹಾಜರಾಗಿಬೇಕು. ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿರುವ ಅಥವಾ ಕಂಟೇನ್ಮೆಂಟ್ ವಲಯದಿಂದ ಬಂದಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಮಾಸ್ಕ್ ಧರಿಸಿಕೊಂಡು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು ಎಂದು ಹೇಳಿದರು. ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕು. ಇದಕ್ಕಾಗಿ ಆರೋಗ್ಯ ಇಲಾಖೆಯಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರು ಅರೆ ವೈದ್ಯಕೀಯ ಸಿಬ್ಬಂದಿಗಳಿಂದ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಪ್ರಥಮ ಚಿಕಿತ್ಸೆ ಪೆಟ್ಟಿಗೆಯೊಂದಿಗೆ ಹಾಜರಿರಬೇಕು. ಪರೀಕ್ಷಾ ಕೇಂದ್ರದಲ್ಲಿನ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಇತರೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಫೋನ್, ಇ-ಕ್ಯಾಮರಾ, ಲ್ಯಾಪ್‌ಟಾಪ್ ತರುವುದನ್ನು ನಿಷೇಧಿಸಲಾಗಿದೆಎಂದರು.
ಪರೀಕ್ಷಾ ದಿನಗಳಂದು ಪ್ರಶ್ನೆ ಪತ್ರಿಕೆಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸರಿಯಾದ ಸಮಯಕ್ಕೆ ತಲುಪಿಸುವ ವ್ಯವಸ್ಥೆಯಾಗಬೇಕು. ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಪರೀಕ್ಷೆಯ ಪ್ರತಿಯೊಂದು ಪ್ರಕ್ರಿಯೆಯನ್ನು ಸಿಸಿ ಕ್ಯಾಮರಾದಡಿಯಲ್ಲಿ ನಡೆಸಬೇಕು. ಯಾವುದೇ ವಿದ್ಯಾರ್ಥಿಗಳು ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯದಂತೆ ನೋಡಿಕೊಳ್ಳತಕ್ಕದ್ದು. ಪ್ರತಿ ವಿದ್ಯಾರ್ಥಿಗೆ ಆಸನದ ವ್ಯವಸ್ಥೆ ಮಾಡಬೇಕು. ಆಸನಗಳ ವ್ಯವಸ್ಥೆಯ ಬಗ್ಗೆ ಸೂಚನಾ ಫಲಕದಲ್ಲಿ ಅಂಟಿಸಬೇಕು ಎಂದು ತಿಳಿಸಿದರು.
ಪರೀಕ್ಷೆ ಸುಸೂತ್ರವಾಗಿ ನಡೆಸುವ ದೃಷ್ಠಿಯಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಆದೇಶ ಹೊರಡಿಸಲಾಗುವುದು. ಅಲ್ಲದೇ ಪರೀûಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತ ಮುತ್ತಲೂ ಇರುವ ಝರಾಕ್ಸ ಅಂಗಡಿಗಳನ್ನು ಮುಚ್ಚಿಸಲು ಕಲಂ 144ನಡಿ ಆದೇಶ ಹೊರಡಿಸಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ತಲಾ ಒಬ್ಬರಂತೆ ವೀಕ್ಷಕರನ್ನು ನೇಮಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಶಿಧರ ಪೂಜಾರ ಮಾತನಾಡಿ, ಪರೀಕ್ಷೆ ನಡೆಸಲು ಕೈಗೊಂಡ ಸಿದ್ಧತೆ ಬಗ್ಗೆ ವಿವರವಾಗಿ ತಿಳಿಸಿಕೊಟ್ಟರು.
ಉಪ ವಿಭಾಗಾಧಿಕಾರಿ ಎಂ. ಗಂಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಜಗದೀಶ ಹೆಬ್ಬಳ್ಳಿ, ಅಲ್ಪಸಂಖ್ಯಾತರ ಇಲಾಖೆಯ ಉಪ ನಿರ್ದೇಶಕ ಎಂ.ಎನ್. ಮೇಲಿನಮನಿ ಮುಂತಾದವರು ಉಪಸ್ಥಿತರಿದ್ದರು