ಬಾಗಲಕೋಟೆ: ಕೊರೊನಾ 2ನೇ ಅಲೆಯಿಂದ ಹೇರಲಾಗಿದ್ದ ಲಾಕ್‌ಡೌನ್ ಸಡಿಲಗೊಂಡಿದ್ದು, 18 ವರ್ಷಗಳ ಮೇಲ್ಪಟ್ಟ ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಪದವಿ ಕಾಲೇಜುಗಳ ಆರಂಭಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಸಹಿತ 43 ಪದವಿ ಕಾಲೇಜುಗಳಿದ್ದು, ಜಿಲ್ಲಾ ಕೇಂದ್ರವಾದ ಬಾಗಲಕೋಟೆಯ ನವನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಯೇ ಸುಮಾರು 1780ಕ್ಕೂ ಹೆಚ್ಚು ಪದವಿ ವಿದ್ಯಾರ್ಥಿಗಳಿದ್ದಾರೆ. ಜಿಲ್ಲೆಯ ಪ್ರತಿಯೊಂದು ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲು ಆರೋಗ್ಯ ಇಲಾಖೆ ಹಾಗೂ ಆಯಾ ಕಾಲೇಜುಗಳ ಆಡಳಿತ ಮಂಡಳಿಗಳ ನೇತೃತ್ವದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬಿವಿವಿ ಸಂಘದ ಎಂಜಿನಿಯರಿಂಗ್ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಬಿವಿವಿ ಸಂಘದ ಆಯುರ್ವೇದಿಕ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಲಸಿಕೆ ಕೇಂದ್ರ ಆರಂಭಿಸಲಾಗಿದೆ. 38 ಸಾವಿರ ವಿದ್ಯಾರ್ಥಿಗಳ ಗುರಿ: ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ, ತೋಟಗಾರಿಕೆ ಕಾಲೇಜು ಸೇರಿದಂತೆ ವಿವಿ ವ್ಯಾಪ್ತಿಯಲ್ಲಿ ಒಟ್ಟು 750ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಅವರೆಲ್ಲರಿಗೂ ಲಸಿಕೆ ಹಾಕಿಕೊಳ್ಳಲು ಈಗಾಗಲೇ ವಿವಿಯಿಂದ ಸೂಚನೆ ನೀಡಿದ್ದು, ಹಲವು ವಿದ್ಯಾರ್ಥಿಗಳು (18 ವರ್ಷ ಮೇಲ್ಪಟ್ಟವರು) ತಮ್ಮ ತಮ್ಮ ಊರುಗಳಲ್ಲಿ ಲಸಿಕೆ ಹಾಕಿಕೊಂಡಿದ್ದಾರೆ.
ಇನ್ನೂ ಹಲವು ವಿದ್ಯಾರ್ಥಿಗಳು, ವಿವಿ ಕೇಂದ್ರ ಸ್ಥಾನದಲ್ಲಿ ಲಸಿಕೆ ಹಾಕಿಕೊಳ್ಳಲು ಸಿದ್ಧರಿದ್ದರೆ ಅವರಿಗೆ ಆರೋಗ್ಯ ಇಲಾಖೆಯಿಂದ ವ್ಯವಸ್ಥೆ ಮಾಡಲಾಗುವುದು. ಪ್ರತಿಯೊಬ್ಬ ವಿದ್ಯಾರ್ಥಿಯೂ ಲಸಿಕೆ ಹಾಕಿಕೊಳ್ಳುವುದು ಕಡ್ಡಾಯ ಎಂದು ವಿವಿಯಿಂದ ತಿಳಿಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು, ಲಸಿಕೆ ಕೇಂದ್ರಗಳಿಗೆ ತೆರಳಿ, ಲಸಿಕೆ ಹಾಕಿಕೊಳ್ಳಲು ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಡಿಗ್ರಿ ಕಾಲೇಜುಗಳ 38 ಸಾವಿರ ವಿದ್ಯಾರ್ಥಿಗಳಿದ್ದು, ಅವರೆಲ್ಲರಿಗೂ ಲಸಿಕೆ ಹಾಕಲು ಸಿದ್ಧತೆ ಮಾಡಲಾಗಿದೆ. 18 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಖಾಸಗಿ 65 ಕಾಲೇಜುಗಳು ಸೇರಿದಂತೆ ಒಟ್ಟು 38 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಅವರೆಲ್ಲರಿಗೂ ಲಸಿಕೆ ಹಾಕಲು ಆರೋಗ್ಯ ಇಲಾಖೆ ತಯಾರಿ ಮಾಡಿಕೊಂಡಿದೆ.