Advertisement

ಕಿತ್ತೂರಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಸಿದ್ಧತೆ

06:51 PM Mar 07, 2021 | Team Udayavani |

ಬೆಳಗಾವಿ: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ ಮಾ. 12ರಂದು ನಡೆಯಲಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಲು ಎಲ್ಲ ಸಿದ್ಧತೆಗಳನ್ನು  ಮಾಡಿಕೊಳ್ಳಬೇಕು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಅಮೃತ ಮಹೋತ್ಸವ ಆಚರಣೆಗೆ ಸಂಬಂಧಿಸಿದಂತೆ ಶನಿವಾರ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನಗಳ ಪ್ರಕಾರ ಎಲ್ಲ ವ್ಯವಸ್ಥೆ ಮಾಡಿಕೊಳ್ಳಬೇಕು. ದೇಶದ 75 ಸ್ಥಳಗಳ ಪೈಕಿ ರಾಜ್ಯದಲ್ಲಿ ಕಿತ್ತೂರು, ಮಂಡ್ಯ ಜಿಲ್ಲೆಯ ಮದ್ದೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವರ್ಚುವಲ್‌ ವೇದಿಕೆಯ ಮೂಲಕ ಸಮಾರಂಭ ನಡೆಯಲಿದೆ. ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದ ನಂತರ ನಿರಂತರ 75 ವಾರಗಳ ಕಾಲ ಸ್ವಾತಂತ್ರ್ಯ ಸಂಗ್ರಾಮದ ಮಹತ್ವದ ಘಟ್ಟಗಳನ್ನು ಮೆಲುಕು ಹಾಕುವ, ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಳ್ಳುವ ಹಾಗೂ ನಮ್ಮೊಂದಿಗೆ ಇರುವ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸುವಂತಹ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚನ್ನಮ್ಮ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಛಾಯಾಚಿತ್ರ ಪ್ರದರ್ಶನಗಳನ್ನು ಜಿಲ್ಲಾದ್ಯಂತ ಆಯೋಜಿಸಬಹುದು ಎಂದು ಸಲಹೆ ನೀಡಿದರು.

ಮಾ. 12ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಎನ್‌ಸಿಸಿ, ಎನ್ನೆಸ್ಸೆಸ್‌, ನೆಹರೂ ಯುವಕೇಂದ್ರ, ಮಹಿಳಾ ಸ್ವಸಹಾಯ ಕೇಂದ್ರಗಳು ಸೇರಿದಂತೆ ವಿವಿಧ ಸಂಸ್ಥೆಗಳನ್ನು ಮಹೋತ್ಸವದಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು. 75 ವಾರಗಳ ಕಾರ್ಯಕ್ರಮಗಳ ವಿಸ್ತೃತ ಪಟ್ಟಿ ರೂಪಿಸಬೇಕು. ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಘಟನಾವಳಿಗಳ ಕುರಿತ ಗೋಡೆಬರಹಗಳನ್ನು ಬರೆಸಬೇಕು. ಬೀದಿನಾಟಕ, ಪ್ರಬಂಧ ಸ್ಪರ್ಧೆಗಳು, ಪಾದಯಾತ್ರೆ, ಶ್ರಮದಾನ, ಸೈಕಲ್‌ ರ್ಯಾಲಿ ಸೇರಿದಂತೆ ವಿವಿಧ ಬಗೆಯ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್‌ ಸೂಚಿಸಿದರು.

ಕಾರ್ಯಕ್ರಮದ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಕಿತ್ತೂರು ಕೋಟೆ ಆವರಣದಲ್ಲಿ ಮಹೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಮುಂದಿನ 75 ವಾರಗಳ ಕಾಲ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದಂತೆ ವಿವಿಧ ಬಗೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

Advertisement

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಡಾ| ಎಚ್‌.ಡಿ.ಕೋಳೇಕರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ, ಡಿಡಿಪಿಐ ಎ.ಬಿ.ಪುಂಡಲೀಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next