ಸವಣೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಶಾಲೆ ಮುಖ್ಯಶಿಕ್ಷಕರು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಡಿಡಿಪಿಐ ಅಂದಾನೆಪ್ಪ ವಡಗೇರಿ ಹೇಳಿದರು.
ಪಟ್ಟಣದ ಅಂಜುಮನ್ ಇಸ್ಲಾಂ ಶಾದಿಮಹಲ್ ಸಭಾಂಗಣದಲ್ಲಿ ಜರುಗಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಶಾಲಾ ಪ್ರಾರಂಭೋತ್ಸವ ನಂತರ ಶಾಲಾ ಮುಖ್ಯಶಿಕ್ಷಕರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ತಾಲೂಕಿನಲ್ಲಿ 7 ಎಸ್‌ಎಸ್ ಎಲ್‌ಸಿ ಪರೀಕ್ಷಾ ಕೇಂದ್ರಗಳಿದ್ದು, ಪ್ರತಿಯೊಂದರಲ್ಲಿ ಪರೀಕ್ಷೆ ಆರಂಭಕ್ಕೂ ಮುನ್ನ ಎಸ್‌ಒಪಿ ನಿಯಮದಂತೆ ಪ್ರತಿಯೊಬ್ಬ ಪರೀಕ್ಷಾಕೇಂದ್ರದ ಅಧಿಕ್ಷಕರು ಸಾಂಕ್ರಾಮಿಕ ರೋಗದ ಹತೋಟಿ ಹಾಗೂ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗೃತ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಸಮಯದಲ್ಲಿ ಮಕ್ಕಳಲ್ಲಿ ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ದಾನಿಗಳು ನೀಡಿದ ಮಾಸ್ಕ್ ಮತ್ತು ಸ್ಯಾನಿಟೈಸರ್ ಗಳ ವ್ಯವಸ್ಥೆ ಮಾಡಲಾಗಿದೆ. ಅವುಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ವಿತರಿಸಿ, ನಿರಂತರವಾಗಿ ಉಪಯೋಗಿಸುವಂತೆ ತಿಳಿಸಬೇಕು. ವಿದ್ಯಾರ್ಥಿಗಳ ಆರೋಗ್ಯದ ವಿಷಯದಲ್ಲಿ ಕೊಂಚವೂ ತೊಂದರೆಯಾಗದಂತೆ ಸಕಲ ಸಿದ್ಧತೆ ಮಾಡಿಕೊಂಡು ಪರೀಕ್ಷೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಬಿಇಒ ಐ.ಬಿ. ಬೆನಕೊಪ್ಪ ಮಾತನಾಡಿ, ಶಾಲೆ ಆರಂಭಕ್ಕೂ ಮುನ್ನ ಮುಖ್ಯಶಿಕ್ಷಕರು ಹಾಗೂ ಸಹಶಿಕ್ಷಕರು ಶಾಲಾ ಪರಿಸರದ ಸ್ವಚ್ಛತಾ ಕಾರ್ಯ ಕೈಗೊಂಡು ಶಾಲೆಗಳಿಗೆ ಬಣ್ಣ ಹಚ್ಚಬೇಕು. ಶಿಕ್ಷಕರು ತಮ್ಮ ವೈಯಕ್ತಿಕ ಆರೋಗ್ಯದ ಜೊತೆಗೆ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಿದರು.
ಬಿಆರ್‌ಸಿ ಸಮನ್ವಯಾಧಿಕಾರಿ ನಾಗರಾಜ ಬಣಕಾರ, ಅಕ್ಷರದಾಸೋಹ ಸಹಾಯಕ ನಿರ್ದೇಶಕ ಸಂಗಮೇಶ ಸುಣದೋಳಿ, ದೈಹಿಕ ಶಿಕ್ಷಣಾಧಿಕಾರಿ ಮೃತ್ಯುಂಜಯಗೌಡ್ರ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎನ್. ಕೆ. ಪಾಟೀಲ ಸೇರಿದಂತೆ ಬಿಆರ್‌ಪಿ, ಸಿಆರ್‌ಪಿಗಳು, ತಾಲೂಕಿನ ವಿವಿಧ ಪ್ರೌಢ ಹಾಗೂ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರು ಇದ್ದರು.