ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿಗಳ ಕಬಳಿಕೆಗೆ ಸಂಬಂಧಿಸಿದಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಸಲ್ಲಿಸಿರುವ ವಿಶೇಷ ವರದಿಯನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಈ ಕುರಿತು ಮಾಜಿ ಸಚಿವ ಎಸ್.ಕೆ. ಕಾಂತಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರಾದ ಪ್ರತಿಮಾ ಹೊನ್ನಾಪುರ ವಾದ ಮಂಡಿಸಿ, ವಿಶೇಷ ವರದಿಯನ್ನು ಸಚಿವ ಸಂಪುಟದ ತೀರ್ಮಾನದಂತೆ ಉಭಯ ಸದನಗಳಲ್ಲಿ ಮಂಡಿಸಲಾಗಿದೆ. ವರದಿ ಆಧರಿಸಿ ಕ್ರಮ ಕೈಗೊಳ್ಳುವ ಬಗ್ಗೆ ಸದನ ನಿರ್ಣಯ ಕೈಗೊಳ್ಳಬೇಕಿದೆ. ತೀರ್ಮಾನ ಕೈಗೊಂಡ ನಂತರ ಆ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುವುದು. ಅದಕ್ಕಾಗಿ ನಾಲ್ಕು ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಮನವಿ ಪುರಸ್ಕರಿಸಿದ ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿತು.
ಅಲ್ಪಸಂಖ್ಯಾತರ ಆಯೋಗವು 2012ರಲ್ಲಿ ಸಲ್ಲಿಸಿರುವ ವಿಶೇಷ ವರದಿಯಲ್ಲಿ ಮಾಡಲಾದ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ವಕ್ಫ್ ಮಂಡಳಿಗೆ ನಿರ್ದೇಶನ ನೀಡಬೇಕು. ವರದಿಯಲ್ಲಿನ ಅಂಶಗಳನ್ನು ಆಧರಿಸಿ ಅದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ತನಿಖೆಯ ಮೇಲ್ವಿಚಾರಣೆಯನ್ನು ಹೈಕೋರ್ಟ್ ಮಾಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. 2022ರ ಸೆ.22ರಂದು ವರದಿಯನ್ನು ವಿಧಾನಪರಿಷತ್ತಿನಲ್ಲಿ ಮಂಡಿಸಲಾಗಿತ್ತು.